ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಸಮಾಜದ ಮೇಲಿದೆ: ಪ್ರಸನ್ನ ಎಡಿಕೇರಿ

May 31, 2026 - 15:27
May 31, 2026 - 15:45
 0  307
ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಸಮಾಜದ ಮೇಲಿದೆ: ಪ್ರಸನ್ನ ಎಡಿಕೇರಿ

ಸೋಮವಾರಪೇಟೆ: ಸರ್ಕಾರಿ ಶಾಲೆಗಳನ್ನು ಕಡೆಗಣಿಸದೆ ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಸಮಾಜದ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಮುಂದಿನ ಪೀಳಿಗೆಗೆ ಮಾದರಿಯಾಗಬೇಕು ಎಂದು ಲೀಡಿಂಗ್ ಎಡ್ಜ್ ಸಂಸ್ಥೆಯ ಮುಖ್ಯಸ್ಥ ಪ್ರಸನ್ನ ಎಡಿಕೇರಿ ಹೇಳಿದರು.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಉಳಿದಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳು ಸಮಾಜಕ್ಕೆ ಪ್ರೇರಣೆಯಾಗಬೇಕು ಎಂದ ಅವರು, ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಸ್ಥಳೀಯ ಪತ್ರಕರ್ತರ ಸಂಘ ಮಾಡುತ್ತಿರುವುದು ಶ್ಲಾಘನೀಯ ಎಂದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ ಅವುಗಳನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕೆಂದು ಕರೆ ನೀಡಿದರು.

ನಂತರ ಮಾತನಾಡಿದ ಮಾದಾಪುರ ಗ್ರಾ.ಪಂ ಮಾಜಿ ಸದಸ್ಯ ಲತೀಫ್ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಎಲ್ಲಾ ಕ್ಷೇತ್ರಗಳಿಂದಲೂ ಅಗತ್ಯ ಸೌಲಭ್ಯಗಳು ದೊರೆಯಬೇಕು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಅವಕಾಶಗಳು ಲಭ್ಯವಿರುವುದರಿಂದ ವಿದ್ಯಾರ್ಥಿಗಳು ಅಲ್ಲಿಯೇ ಶಿಕ್ಷಣ ಪಡೆಯಲು ಮುಂದಾಗಬೇಕು ಎಂದರು.

ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದ ಅವರು ಸಂಘಕ್ಕೆ ₹10,000 ದೇಣಿಗೆ ನೀಡಿದರು.

 ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಉತ್ತಮ ಜೀವನ ಕಟ್ಟಿಕೊಂಡಿದ್ದಾರೆ. ಸರ್ಕಾರಿ ಶಾಲೆಗಳು ಪ್ರತಿಭೆಗಳ ತೊಟ್ಟಿಲಾಗಿವೆ ಎಂದರು.

ಸರ್ಕಾರಿ ಶಾಲೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಎಸ್ಎಸ್ಎಲ್ ಸಿ ವಿಭಾಗದಲ್ಲಿ ಕಿರಗಂದೂರು ಸರ್ಕಾರಿ ಪ್ರೌಢ ಶಾಲೆಯ ಅಶ್ವಧಿ, ನೇರುಗಳಲೆ ಪ್ರೌಢ ಶಾಲೆಯ ನಿರೀಕ್ಷಾ, ಪಿಯುಸಿ ವಿಭಾಗದಲ್ಲಿ ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಂಕಿತ, ಐಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಯಶಸ್ವಿ, ಮಾದಾಪುರ ಮುರಾರ್ಜಿ ಪದವಿ ಪೂರ್ವ ಕಾಲೇಜಿನ ದ್ರುವ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

 ಇದೇ ಸಂದರ್ಭದಲ್ಲಿ ಪ್ರಸನ್ನ ಎಡಿಕೇರಿ ಅವರು ಪತ್ರಕರ್ತರ ಸಂಘದ ಪತ್ರಕರ್ತರ ವರದಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ₹25,000ರೂ ಗಳ ದತ್ತಿ ನಿಧಿಯನ್ನು ಘೋಷಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ವಿಶ್ವ ಕುಂಬೂರು ವಹಿಸಿದ್ದರು.

ಸಂಘದ ನಿರ್ದೇಶಕ ವಿಜಯ್ ಹಾನಗಲ್ ಕಾರ್ಯಕ್ರಮ ನಿರೂಪಿಸಿದರು ಉಪಾಧ್ಯಕ್ಷ ಎಸ್.ಡಿ.ವಿಜೇತ್, ಜಿಲ್ಲಾ ಉಪಾಧ್ಯಕ್ಷ ವಾಸು, ನಿರ್ದೇಶಕ ಚರಿಯಾಮನೆ ಸುರೇಶ್, ಸೋಮವಾರಪೇಟೆ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಮಹೇಶ್ ಸೇರಿದಂತೆ ಹಲವರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0