ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಕೌಶಲ ಬೆಳೆಸಿಕೊಳ್ಳಬೇಕು: ಬಸವರಾಜ ಹೊರಟ್ಟಿ ಅಭಿಮತ

ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಕೌಶಲ ಬೆಳೆಸಿಕೊಳ್ಳಬೇಕು: ಬಸವರಾಜ ಹೊರಟ್ಟಿ ಅಭಿಮತ

ಕುಶಾಲನಗರ, ಜೂನ್ 23: ಉನ್ನತ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಮೌಲ್ಯಗಳು, ಕೌಶಲ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ನಾಗರಿಕರಾಗಲು ಸಾಧ್ಯ ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಮತ ವ್ಯಕ್ತಪಡಿಸಿದರು.

ಕೊಡಗು ವಿಶ್ವವಿದ್ಯಾಲಯದ ಚಿಕ್ಕಅಳುವಾರದ ಜ್ಞಾನ ಕಾವೇರಿ ಆವರಣದಲ್ಲಿ ಮಂಗಳವಾರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕಷ್ಟೇ ಸೀಮಿತವಾಗಬಾರದು. ಅದು ವ್ಯಕ್ತಿತ್ವ ವಿಕಸನ, ಸಮಾಜಮುಖಿ ಚಿಂತನೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಪೂರಕವಾಗಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಜೊತೆಗೆ ಕೌಶಲಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣವಂತ ಮಹಿಳೆಯರಿಂದ ಕುಟುಂಬ ಮತ್ತು ಸಮಾಜ ಸದೃಢವಾಗುತ್ತದೆ. ಇಂದಿನ ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದು, ಅವರಿಗೆ ಆತ್ಮವಿಶ್ವಾಸ, ನಾಯಕತ್ವದ ಗುಣ ಹಾಗೂ ಕೌಶಲಗಳನ್ನು ಬೆಳೆಸಲು ಶಿಕ್ಷಣ ಸಂಸ್ಥೆಗಳು ಪೂರಕ ವಾತಾವರಣ ನಿರ್ಮಿಸಬೇಕು. ಪಾಲಕರು ಹೆಣ್ಣು-ಗಂಡು ಎಂಬ ಭೇದಭಾವವಿಲ್ಲದೆ ಸಮಾನ ಅವಕಾಶಗಳನ್ನು ಕಲ್ಪಿಸಬೇಕು ಎಂದು ಅವರು ಹೇಳಿದರು.

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಲಾಗುತ್ತಿದೆ. ರಾಜ್ಯದ ಹಿರಿಯ ಶಿಕ್ಷಣ ತಜ್ಞ ಹಾಗೂ ವಿಧಾನ ಪರಿಷತ್ ಅಧ್ಯಕ್ಷರಾದ ಬಸವರಾಜ ಹೊರಟ್ಟಿಯವರ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆಯ ಯೋಜನೆಯ ಅಡಿಯಲ್ಲಿ ಬೈಫ್ ಸಂಸ್ಥೆಯು ರೈನ್ ಫಾರೆಸ್ಟ್ ಅಲೈಯನ್ಸ್ ಅವರ ಸಹಯೋಗದಲ್ಲಿ ಸಬಲ ಎಂಬ ವಿಶಿಷ್ಟ ಕಾರ್ಯಕ್ರಮದ ಮೂಲಕ ಕೊಡಗು ವಿಶ್ವವಿದ್ಯಾಲಯದ ಚಿಕ್ಕಾಳುವಾರದ ಜ್ಞಾನ ಕಾವೇರಿ ಆವರಣದಲ್ಲಿ 1,325 ಸಸಿಗಳನ್ನು ನೆಟ್ಟು ಸಂರಕ್ಷಿಸುವ ಕಾರ್ಯಕ್ರಮಕ್ಕೆ ಬಸವರಾಜ ಹೊರಟ್ಟಿಯವರು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಹಿಂದುಸ್ತಾನಿ ಗಾಯಕ ಡಾ.ಮೃತ್ಯುಂಜಯ ಶೆಟ್ಟರ ಅವರು ವಚನ ಗಾಯನ ನಡೆಸಿಕೊಟ್ಟರು. 

ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಕೃಷ್ಣಮೂರ್ತಿ, ಗ್ರಾಮಾಂತರ ಪೊಲೀಸ್ ಠಾಣೆ ಕುಶಾಲನಗರ ಆರಕ್ಷಕ ಉಪನಿರೀಕ್ಷಕರು ರಾಮಚಂದ್ರ ಮತ್ತು ಸಿಬ್ಬಂದಿ, ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕನ್ನಡ ವಿಭಾಗದ ಉಪನ್ಯಾಸಕ ಡಾ ಜಮೀರ್ ಅಹಮದ್ ನಿರೂಪಿಸಿ, ವಂದಿಸಿದರು.