ಮೂರ್ನಾಡಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ: ಮಾದಕ ವ್ಯಸನದಿಂದ ದೂರವಿರಲು ಕರೆ
admincoorgdaily

ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ವಿರಾಜಪೇಟೆ ತಾಲೂಕಿನ ಮೂರ್ನಾಡು ವಲಯದ ವತಿಯಿಂದ ಮೂರ್ನಾಡಿನ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ದೇವಕಿ ಅವರು, ಇಂದಿನ ಯುವಜನತೆ ದುರಭ್ಯಾಸಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯ ಮತ್ತು ನಡವಳಿಕೆಯನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ವಿರಾಜಪೇಟೆಯ ಕಾವೇರಿ ಕಾಲೇಜಿನ ಉಪನ್ಯಾಸಕರಾದ ಬಾಬು ಕೆ.ಎಂ. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, "ತಂಬಾಕು, ಸಿಗರೇಟು, ಗುಟ್ಕಾ, ಮದ್ಯಪಾನ ಹಾಗೂ ಡ್ರಗ್ಸ್ಗಳ ಸೇವನೆಯು ಯುವಜನತೆಯ ಜೀವನವನ್ನು ನಾಶಪಡಿಸುತ್ತದೆ. ಅಪರಿಚಿತರು ನೀಡುವ ಯಾವುದೇ ವಸ್ತುಗಳನ್ನು ಸ್ವೀಕರಿಸಬಾರದು. ಡ್ರಗ್ಸ್ ಸೇವನೆ ಮತ್ತು ಮಾರಾಟವು ಕಾನೂನುಬಾಹಿರವಾಗಿದ್ದು, ಕಠಿಣ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ" ಎಂದು ಎಚ್ಚರಿಸಿದರು. ಅಲ್ಲದೆ ಶ್ರೀ ಕ್ಷೇತ್ರ ಧರ್ಮಸ್ಥಳದ ಖಾವಂದರ ಆಶಯ ಹಾಗೂ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮುಖ್ಯ ಉದ್ದೇಶಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಮಡಿಕೇರಿಯ ಶ್ರೀ ಶಕ್ತಿ ಅಸೋಸಿಯೇಷನ್‌ನ ಸತೀಶ್, ವಲಯ ಮೇಲ್ವಿಚಾರಕರಾದ ಸುಜೀರ್, ಸೇವಾ ಪ್ರತಿನಿಧಿ ದಿವ್ಯಾ, ಕಾಲೇಜಿನ ಅಧ್ಯಾಪಕ ವೃಂದ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.