Kodagu

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ; ಎಸ್.ಜೆ.ಸೋಮಶೇಖರ್

admincoorgdaily

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ; ಎಸ್.ಜೆ.ಸೋಮಶೇಖರ್

ಮಡಿಕೇರಿ ಏ.18:-ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. 

ನಗರದ ಜಿ.ಪಂ.ಸಭಾಂಗಣದಲ್ಲಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಬೇಸಿಗೆಯು ಈ ಬಾರಿ ಹೆಚ್ಚಿದ್ದು, ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ದೂರುಗಳು ಬಾರದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.  

ಈ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನಗರ ವ್ಯಾಪ್ತಿಯಲ್ಲಿ ನಗರಸಭೆ ಆಯುಕ್ತರು, ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. 

ಕುಡಿಯುವ ನೀರು ಪೂರೈಕೆಯ ಮೂಲಗಳಲ್ಲಿನ ನೀರಿನ ಲಭ್ಯತೆಯ ಬಗ್ಗೆ ಮಾಹಿತಿ ಹೊಂದಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು. 

ಜಿಲ್ಲೆಯ 40 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಮಾಹಿತಿ ಇದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದರು. 

ಇದೇ ವೇಳೆ ಜಿ.ಪಂ.ಉಪ ಕಾರ್ಯದರ್ಶಿ ಚಂದ್ರಶೇಖರ್ ಅವರು ಮಾತನಾಡಿ, ಈಗಾಗಲೇ ಗ್ರಾ.ಪಂ.ಗಳೊಂದಿಗೆ ಹಲವು ಸುತ್ತಿನ ಸಭೆ ನಡೆಸಿದ್ದು, ಈವರೆಗೂ ಯಾವುದೇ ಸಮಸ್ಯೆ ತಲೆದೂರಿಲ್ಲ, ಮುಂದೆಯೂ ಸಮಸ್ಯೆಯಾಗದಂತೆ ಎಚ್ಚರ ವಹಿಸಲಾಗುವುದು ಎಂದರು. 

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಸರ್ಕಾರ ನಡೆಸುವ ಮಹನೀಯರ ಜಯಂತಿ ಕಾರ್ಯಕ್ರಮದಲ್ಲಿ ಕಡ್ದಾಯವಾಗಿ ಹಾಜರಿರಬೇಕು. ಇದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕಿವಿಮಾತು ಹೇಳಿದರು. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಭಾಸ್ಕರ್, ತಾ.ಪಂ.ಇಒ ಶೇಖರ್, ಪರಮೇಶ್, ಅಪ್ಪಣ್ಣ ಇತರರು ಇದ್ದರು.