ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ: ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ

Jul 27, 2026 - 00:05
 0  1
ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ: ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ

ಬೆಂಗಳೂರು, ಜುಲೈ 26, (ಕರ್ನಾಟಕ ವಾರ್ತೆ): ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ ಆಯೋಗವು 2026ರ ಜುಲೈ 26ರಂದು ತುರ್ತು ಸಭೆ ನಡೆಸಿದೆ.

 ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಹಾಗೂ ಆರೋಪಗಳ ಗಂಭೀರತೆಯನ್ನು ಮನಗಂಡು ಆಯೋಗವು ಕೆಳಕಂಡ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಆಯೋಗದ ಕಾರ್ಯದರ್ಶಿ ಶ್ರೀಮತಿ ಕೆ. ಜ್ಯೋತಿ ಅವರು ತಿಳಿಸಿದ್ದಾರೆ.

 ಪ್ರಾಥಮಿಕ ಮಾಹಿತಿಯ ಪರಿಶೀಲನೆ: 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು, ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಹಾಗೂ 2026ರ ಜುಲೈ 25ರಂದು ಪೊಲೀಸ್ ಇಲಾಖೆ ನೀಡಿರುವ ಪ್ರಾಥಮಿಕ ಮಾಹಿತಿ ವರದಿಯನ್ನು (FIR) ಆಯೋಗವು ಗಂಭೀರವಾಗಿ ಪರಿಗಣಿಸಿದೆ.

ಆಂತರಿಕ ತನಿಖಾ ಉಪಸಮಿತಿ ರಚನೆ: ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಆಯೋಗದ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ಆಂತರಿಕ ತನಿಖಾ ಉಪಸಮಿತಿಯನ್ನು ರಚಿಸಲಾಗಿದೆ. ಒಂದು ವಾರದಲ್ಲಿ ವರದಿ ಸಲ್ಲಿಕೆ: ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತ ಹಾಗೂ ಸಂಬಂಧಿತ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ವಾಸ್ತವಾಂಶಗಳ ಕುರಿತ ವಿವರವಾದ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸುವಂತೆ ಉಪಸಮಿತಿಗೆ ನಿರ್ದೇಶನ ನೀಡಲಾಗಿದೆ.

ತನಿಖೆಗೆ ನೋಡಲ್ ಅಧಿಕಾರಿಗಳ ನೇಮಕ: ತನಿಖಾ ಕಾರ್ಯಕ್ಕೆ ಅಗತ್ಯವಾದ ಆಡಳಿತಾತ್ಮಕ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ಕೆಪಿಎಸ್‌ಸಿ ಕಾರ್ಯದರ್ಶಿಯನ್ನು ಹಾಗೂ ಅಗತ್ಯ ಕಾನೂನು ಸಲಹೆ ನೀಡಲು ಕಾನೂನು ವಿಭಾಗದ ಮುಖ್ಯಸ್ಥರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ.

ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ: ಆಂತರಿಕ ತನಿಖಾ ಉಪಸಮಿತಿ ತನ್ನ ಅಂತಿಮ ವರದಿಯನ್ನು ಸಲ್ಲಿಸುವವರೆಗೆ, 2026ರ ಜುಲೈ 17ರಂದು ಪ್ರಕಟಿಸಲಾಗಿದ್ದ ಪಶುವೈದ್ಯಾಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯ ಜಾರಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಆಯೋಗವು ನಿರ್ಧರಿಸಿದೆ. ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಬದ್ಧವಾಗಿದ್ದು, ತನಿಖಾ ವರದಿಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0