ಗ್ಯಾರಂಟಿ ಯೋಜನೆಗಳೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕೆಲಸ ಮಾಡುತ್ತಿದೆ:ಜಿಲ್ಲಾ ಕಾಂಗ್ರೆಸ್ ವಕ್ತಾರ ಸುರೇಶ್ ಅಭಿಪ್ರಾಯ
admincoorgdaily
ಮಡಿಕೇರಿ: ಈ ಹಿಂದಿನ ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿಯ ಕಾಳಜಿ ಇರಲಿಲ್ಲ. ಆದರೆ, ಈಗಿನ ರಾಜ್ಯ ಸರ್ಕಾರ 05 ಗ್ಯಾರೆಂಟಿ ಯೋಜನೆಗಳೊಂದಿಗೆ ಅಭಿವೃದ್ಧಿ ಕಾರ್ಯಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಸುರೇಶ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್‌ಗೌಡ ಅವರು ವಿಶೇಷ ಕಾಳಜಿಯಿಂದ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ, ಜನರಲ್ ತಿಮ್ಮಯ್ಯ ಪ್ರತಿಮೆ ನಿರ್ಮಾಣ, ಮಹಾತ್ಮ ಗಾಂಧಿ ಸ್ಮಾರಕ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.
ಇಂದು ರಾಜ್ಯ ಸರ್ಕಾರ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್‌ಗೌಡ ಅವರ ವಿಶೇಷ ಕಾಳಜಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಾಕಷ್ಟು ಅನುದಾನವನ್ನು ತರಲಾಗಿದ್ದು, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಈ ಹಿಂದಿನ ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿಯ ಕಾಳಜಿ ಇರಲಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ, ಕೇಂದ್ರದಲ್ಲಿ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಇಲ್ಲದಿದ್ದಲ್ಲಿ ಕೇಂದ್ರ ಸರ್ಕಾರ ಬೀಳುತ್ತದೆ ಎಂದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತದೊಂದಿಗೆ ಆಡಳಿತ ನಡೆಸುತ್ತಿದ್ದು, ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಎಚ್.ಎಂ.ಜಯರಾಮ್, ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ.ಅಶೋಕ್, ಸದಸ್ಯ ವಿ.ತಸ್ಲಿಮ್, ನಗರಸಭೆ ನಾಮ ನಿರ್ದೇಶಕ ಸದಸ್ಯರಾದ ಬಿ.ಎಂ.ಮುದ್ದುರಾಜ್, ಸದಾ ಮುದ್ದಪ್ಪ ಇದ್ದರು.