ಸಿದ್ದಾಪುರ ವ್ಯಾಪ್ತಿಯಲ್ಲಿ ಹುಲಿ ಆತಂಕ : ,ಚಲನವಲನ ಪತ್ತೆಗಾಗಿ ಕ್ಯಾಮೆರಾ ಅಳವಡಿಸಿದ ಅರಣ್ಯ ಇಲಾಖೆ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸುತ್ತಮುತ್ತಲಿನ ಗ್ರಾಮ ವ್ಯಾಪ್ತಿಯ ಕಾಫಿತೋಟಗಳಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿ ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಶುರುವಾಗಿದೆ. ಸಿದ್ದಾಪುರ ಸಮೀಪದ ಗುಹ್ಯ ವ್ಯಾಪ್ತಿಯ ಹಲವಡೆ ಹುಲಿ ಹೆಜ್ಜೆ ಗುರುತು ಪತ್ತೆಯಾದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾಣಿಸಿಕೊಂಡಿರುವ ಹುಲಿಯನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ ಹಿನ್ನೆಲೆ ಹುಲಿ ಪತ್ತೆಗಾಗಿ ಕಳೆದೆರಡು ದಿನಗಳಿಂದ ಕೂಂಬಿಂಗ್ ಕಾರ್ಯಚರಣೆ ನಡೆಸಿದರು. ಗುಹ್ಯ,ಇಂಜಿಲಗೆರೆ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು ಸ್ಥಳೀಯ ನಿವಾಸಿಗಳು ಎಚ್ಚರ ವಹಿಸಬೇಕೆಂದು ಮನವಿ ಮಾಡಿದ ಇಲಾಖೆ ಹುಲಿಯ ಚಲನವಲನ ಪತ್ತೆ ಹಚ್ಚಲು ಕ್ಯಾಮೆರಾ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ವಲಯ ಅರಣ್ಯಾಧಿಕಾರಿ ಶಿವರಾಂ, ಉಪ ವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ ಸೇರಿದಂತೆ ಆರ್ ಆರ್ ಟಿ ಸಿಬ್ಬಂದಿಗಳು ಇದ್ದರು.