ಕುಶಾಲನಗರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಕುರಿತು ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ಬಿಇಓ ಕೃಷ್ಣಪ್ಪ ಸಲಹೆ

Nov 29, 2025 - 14:04
 0  200
ಕುಶಾಲನಗರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಕುರಿತು ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ:  ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ಬಿಇಓ ಕೃಷ್ಣಪ್ಪ ಸಲಹೆ

ಕುಶಾಲನಗರ, ನ.29: ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಹೊಸದಾಗಿ ಜಾರಿಗೆ ತಂದಿರುವ ಪಠ್ಯಾಧಾರಿತ ಮೌಲ್ಯಾಂಕವನ್ನು ಚಾಚು ತಪ್ಪದೇ ಪರಿಪಾಲಿಸುವ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕರೆ ನೀಡಿದರು.

 ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ತಾಲ್ಲೂಕಿನ ಪ್ರೌಢಶಾಲಾ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಶಿಕ್ಷಕರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಸುಧಾರಿಸುವ ಕುರಿತಂತೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲಾ ಶಿಕ್ಷಣ ಇಲಾಖೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಿರುವ ಪಠ್ಯಾಧಾರಿತ ಮೌಲ್ಯಾಂಕ( ಎಲ್.ಬಿ.ಎ.) ಬೋಧನೆ ಮೂಲಕ ಮಕ್ಕಳ ಕಲಿಕಾ ಪ್ರಗತಿಯ ಉನ್ನತೀಕರಣಕ್ಕೆ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು ಎಂದರು. ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ರಶ್ಮಿ ಮಹೇಶ್ ಅವರ ನೇತೃತ್ವದಲ್ಲಿ ಪ್ರಸಕ್ತ ಸಾಲಿನಲ್ಲಿ ಪಠ್ಯಾಧಾರಿತ ಮೌಲ್ಯಾಂಕ( ಎಲ್.ಬಿ.ಎ.) ಪದ್ಧತಿಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಪದ್ಧತಿಯು ವಿದ್ಯಾರ್ಥಿಗಳ ಕಲಿಕೆಗೆ ಪ್ರೇರೇಣೆಯಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಸರ್ಕಾರವು ಎಸ್ಎಸ್ಎಲ್‌ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ಹಲವು ಯೋಜನೆಗಳನ್ನು ರೂಪಿಸಿದ್ದು, ಶಾಲಾ ಹಂತದಲ್ಲಿ ಇದನ್ನು ಪರಿಪಾಲಿಸುವ ಮೂಲಕ ಪ್ರಾಯೋಗಿಕವಾಗಿ ವಿವಿಧ ರೀತಿಯ ಪರೀಕ್ಷೆಗಳನ್ನು ನಡೆಸಿ ಪರೀಕ್ಷಾ ಫಲಿತಾಂಶವನ್ನು ಸುಧಾರಿಸಬೇಕು. ಶಾಲಾ ಶಿಕ್ಷಣ ಇಲಾಖೆಯು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರ ದೂರದೃಷ್ಟಿಯನ್ವಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು ಅನುತ್ತೀರ್ಣಗೊಳ್ಳದಂತೆ ನಿಗಾ ವಹಿಸಿ ಪ್ರತಿ ವಿದ್ಯಾರ್ಥಿಯು ಈ ಪರೀಕ್ಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆ ಹೊಂದುವಂತೆ ಶಿಕ್ಷಕರು ಕ್ರಮ ವಹಿಸಬೇಕಿದೆ. ಶಿಕ್ಷಣ ಇಲಾಖೆಯು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಶಿಕ್ಷಕರು ಇದರ ತೀವ್ರತೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಬಿಇಓ ಕೃಷ್ಣಪ್ಪ ತಿಳಿಸಿದರು.

ತರಬೇತಿಯ ಮೇಲುಸ್ತುವಾರಿ ಅಧಿಕಾರಿಯಾದ ಕೂಡಿಗೆ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ತೇರ್ಗಡೆ ಯಾಗುವ ರೀತಿಯಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಬೇಕು. ಪಠ್ಯಾಧಾರಿತ ಮೌಲ್ಯಾಂಕ (ಎಲ್.ಬಿ.ಎ.) ಮಾದರಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎ.ಸಿ.ಮಂಜುನಾಥ್ ಮಾತನಾಡಿದರು.

 ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿರ್ದೇಶಕ ‌ಕೆ.ಪಿ.ಜಯಕುಮಾರ್, ಕೋಶಾಧಿಕಾರಿ ಎಲ್.ಆರ್. ಕವಿತ,ಸಿ ಆರ್ ಪಿ ಶಾಲಿನಿ ಇದ್ದರು. ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಗೌಡಳ್ಳಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಚ್.ಆನಂದಪ್ಪ, ತರಬೇತಿ ಸಂಪನ್ಮೂಲ ಶಿಕ್ಷಕರಾದ ಕೆ.ಮೂರ್ತಿ, ಬಿ.ಬಿ.ದಿನೇಶ್, ಹ್ಯೂಬರ್ಟ್ ಡಯಾಸ್, ಬಿ.ಎನ್.ಸುಜಾತ, ಎಸ್.ಎನ್. ವೇಣುಗೋಪಾಲ್ ಹಾಗೂ ಮಧುಕುಮಾರ್ ಅವರು ವಿಷಯವಾರು ಶಿಕ್ಷಕರೊಡನೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ನೀಲನಕ್ಷೆ ಮತ್ತು ಪ್ರಶ್ನೆ ಪತ್ರಿಕೆ ತಯಾರು ಮಾಡುವ ಕುರಿತು ಮಾಹಿತಿ ನೀಡಿದರು. ಮತ್ತಿತರರು ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 1