ಇಎಸ್‌ಐ ಆಸ್ಪತ್ರೆಯಲ್ಲಿ ಪರಿಣಾಮಕಾರಿ ಚಿಕಿತ್ಸೆ ಒದಗಿಸಲು ಯದುವೀರ್ ಸೂಚನೆ: ಮೈಸೂರು ಇಎಸ್‌ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮೈಸೂರು-ಕೊಡಗು ಸಂಸದರು

ಮೈಸೂರು: ಮೈಸೂರಿನ ಕೆ.ಆರ್.ಎಸ್. ರಸ್ತೆಯಲ್ಲಿರುವ ಇಎಸ್‌ಐ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು, ವೈದ್ಯರು, ಆಡಳಿತ ಮಂಡಳಿಯ ಅಧಿಕಾರಿಗಳು ತಾಳ್ಮೆಯಿಂದ ವರ್ತಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ."ಇಎಸ್‌ಐ ಆಸ್ಪತ್ರೆ ನಿತ್ರಾಣ" ಎಂಬ ಶೀರ್ಷಿಕೆಯಡಿ ಮಾಧ್ಯಮದಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಯದುವೀರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಸೋಮವಾರ ಇಎಸ್‌ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರು ಮತ್ತು ಆಡಳಿತ ಮಂಡಳಿಗೆ ತಾಳ್ಮೆಯಿಂದ ಇರುವಂತೆ ಸೂಚನೆ ನೀಡಲಾಯಿತು ಎಂದು ತಿಳಿಸಿದ್ದಾರೆ.ರೋಗಿಗಳಿಗೆ ಸೂಕ್ತ, ಸಮರ್ಪಕ, ಪರಿಣಾಮಕಾರಿ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಕೊಳ್ಳಬೇಕು. ಎಲ್ಲಾ ಸಮಯದಲ್ಲೂ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಸೂಚನೆ ನೀಡಲಾಯಿತು ಎಂದು ಯದುವೀರ್ ಸ್ಪಷ್ಟಪಡಿಸಿದ್ದಾರೆ.
ವೈದ್ಯಕೀಯ ಯಂತ್ರೋಪಕರಣಗಳು, ತಜ್ಞ ವೈದ್ಯರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು. ಖಾಲಿ ಇರುವ ವೈದ್ಯ-ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿದೆ ಎಂದು ಸಂಸದ ಯದುವೀರ್ ಸ್ಪಷ್ಟಪಡಿಸಿದ್ದಾರೆ.