ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿನ ಆರೋಗ್ಯ ಸೇವೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಚಿವರಲ್ಲಿ ಹಲವು ಬೇಡಿಕೆಗಳ ಮನವಿ ಸಲ್ಲಿಸಿ ಚರ್ಚಿಸಿದ ಎ.ಎಸ್ ಪೊನ್ನಣ್ಣ

ಬೆಂಗಳೂರು:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಮಾತುಕತೆ ನಡೆಸಿದರು.
ಕ್ಷೇತ್ರಾದ್ಯಂತ ಜನರ ಅವಶ್ಯಕತೆಗಳು ಹಾಗೂ ಆರೋಗ್ಯ ಸಮಸ್ಯೆಗಳ ಬಗ್ಗೆ ಸವಿರವಾಗಿ ಆರೋಗ್ಯ ಸಚಿವರಿಗೆ ವಿವರಿಸಿದ ಶಾಸಕರು, ತನ್ನ ಕ್ಷೇತ್ರಗಳಲ್ಲಿನ ಆಸ್ಪತ್ರೆಗಳ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದರು. ವಿಶೇಷವಾಗಿ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಗಳ ಮೇಲ್ದರ್ಜೆಗೆ ಬಜೆಟ್ ನಲ್ಲಿ ಅನುಮೋದನೆ ದೊರಕಿರುವುದನ್ನು ಇಲ್ಲಿ ಸ್ಮರಿಸಬಹುದು. ಅದೇ ರೀತಿ ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಹಾಗೂ ವೈದ್ಯರುಗಳ ಕೊರತೆಯ ಬಗ್ಗೆ ಸಚಿವರ ಗಮನ ಸೆಳೆದಾಗ, ಕೂಡಲೇ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕ್ಷೇತ್ರಕ್ಕೆ ಸಂಬಂಧಿಸಿದ ಇನ್ನೂ ಹಲವು ಬೇಡಿಕೆಗಳನ್ನು ಹಂತಹಂತವಾಗಿ ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಸಚಿವರು ಭರವಸೆ ನೀಡಿದರು.
ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತರು, ಸರಕಾರದ ಅಭಿಯಾನ ನಿರ್ದೇಶಕರು, ಮಡಿಕೇರಿ DHO ಡಾಕ್ಟರ್ ಸತೀಶ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.