ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮ ಬಗ್ಗೆ ಎಚ್ಚರಿಕೆ ವಹಿಸಿ: ಮಾರುತಿ ಎಸ್.ಬಾಗಡೆ
admincoorgdaily

ಮಡಿಕೇರಿ:-ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆಯಿಂದ ಮಕ್ಕಳ ಮೇಲೆ ಹಲವು ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿದ್ದು, ಮಕ್ಕಳ ಮಾನಸಿಕ ಮತ್ತು ಭಾವನಾತ್ಮಕ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಮಾರುತಿ ಎಸ್.ಬಾಗಡೆ ಅವರು ಸಲಹೆ ನೀಡಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸರ್ಕಾರಿ ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ಮತ್ತು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಗರದ ನ್ಯಾಯಾಲಯದ ಆವರಣದಲ್ಲಿ ‘ಸುರಕ್ಷಿತ ಬಾಲ್ಯ ಅಭಿಯಾನ’ ಪ್ರಯುಕ್ತ ಶಿಕ್ಷಕರುಗಳಿಗೆ ನಡೆದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮೊಬೈಲ್ ಮತ್ತು ಇಂಟರ್ನೆಟ್ ಮೂಲಕವೂ ಮಕ್ಕಳು ವಿವಿಧ ರೀತಿಯ ಶೋಷಣೆಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿದ್ದು, ಮಕ್ಕಳನ್ನು ಉತ್ತಮ ರೀತಿಯಲ್ಲಿ ಬೆಳೆಸಲು ವಿಶೇಷ ಗಮನಹರಿಸಬೇಕು ಎಂದರು.
ಬಾಲ್ಯದಲ್ಲಿಯೇ ಮಕ್ಕಳಿಗೆ ಮೊಬೈಲ್ ಬಳಕೆಯ ಮಿತಿ ತಿಳಿಸಿಕೊಡುವುದು ಅಗತ್ಯ. ಮಕ್ಕಳನ್ನು ಮೊಬೈಲ್ ಬಳಕೆಯಿಂದ ಹೊರತಂದು ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗಳು ಹಾಗೂ ಬೌದ್ಧಿಕ ಬೆಳವಣಿಗೆಗೆ ಪೂರಕವಾದ ಚಟುವಟಿಕೆಗಳಲ್ಲಿ ತೊಡಗಿಸಲು ಉತ್ತೇಜನ ನೀಡಬೇಕು. ಮೊಬೈಲ್ ಬಳಕೆಗೆ ನಿಯಂತ್ರಣ ಹೇರಿದಾಗ ಮಕ್ಕಳಲ್ಲಿ ಕ್ರೀಡೆ ಹಾಗೂ ಇತರ ಸೃಜನಶೀಲ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.
ಪ್ರಸ್ತುತ ಸಣ್ಣ ಮಕ್ಕಳಿಂದ ಹಿಡಿದು ಹದಿಹರೆಯದವರವರೆಗೆ ಸಾಮಾಜಿಕ ಜಾಲತಾಣಗಳು ಹಾಗೂ ಇಂಟರ್ನೆಟ್ ಮೂಲಕ ವಿವಿಧ ಮಾಹಿತಿಗಳು ವೇಗವಾಗಿ ತಲುಪುತ್ತಿವೆ. ಇದರಿಂದ ಮಕ್ಕಳಿಗೆ ಅವರ ವಯಸ್ಸಿಗೆ ಮೀರಿದ ವಿಷಯಗಳ ಪರಿಚಯವಾಗುತ್ತಿದೆ. ಆದ್ದರಿಂದ ಮಕ್ಕಳ ಆನ್ಲೈನ್ ಚಟುವಟಿಕೆಗಳ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದರು.
ಮಕ್ಕಳ ಸುರಕ್ಷತೆ ಕುರಿತು ಸೂಕ್ತ ಮಾರ್ಗದರ್ಶನ ನೀಡಿ, ಅವರ ಸಮಸ್ಯೆಗಳನ್ನು ಆಲಿಸಿ, ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸರ್ಕಾರದ ಪ್ರಯತ್ನಗಳಿಗೆ ಸಾರ್ವಜನಿಕರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಮಕ್ಕಳಿಗೆ ವಿಡಿಯೊಗಳ ಮೂಲಕ ಮಾಹಿತಿ ನೀಡುವಾಗಲೂ ಹಾಗೂ ಚಾಕಲೇಟ್ ಸೇರಿದಂತೆ ವಿವಿಧ ಆಮಿಷಗಳನ್ನು ಒಡ್ಡುವ ಸಂದರ್ಭಗಳಲ್ಲಿಯೂ ಅವುಗಳ ಹಿಂದಿನ ಉದ್ದೇಶ ಮತ್ತು ಸಂಭವನೀಯ ಅಪಾಯಗಳ ಬಗ್ಗೆ ಜಾಗರೂಕತೆ ವಹಿಸಬೇಕು ಎಂದು ಮಾರುತಿ ಎಸ್.ಬಾಗಡೆ ಅವರು ಎಚ್ಚರಿಸಿದರು.
‘ಶಾಲೆಗಳಲ್ಲಿ ಪಾಠದ ಅವಧಿಯೊಂದಿಗೆ ಮಕ್ಕಳ ಸುರಕ್ಷತೆ, ವೈಯಕ್ತಿಕ ಅರಿವು ಹಾಗೂ ಮಾನಸಿಕ ಬೆಳವಣಿಗೆಗೆ ಸಂಬಂಧಿಸಿದ ವಿಷಯಗಳ ಕುರಿತು ಕನಿಷ್ಠ 15 ನಿಮಿಷಗಳ ವಿಶೇಷ ಸಮಯ ಮೀಸಲಿಡುವ ಯೋಜನೆ ರೂಪಿಸಬೇಕು.
ಮಕ್ಕಳ ಮನಸ್ಥಿತಿ ಅರ್ಥಮಾಡಿಕೊಳ್ಳುವುದರ ಜತೆಗೆ ಪೋಷಕರ ಜವಾಬ್ದಾರಿ ಮತ್ತು ಮನೋಭಾವದಲ್ಲಿಯೂ ಅಗತ್ಯ ಬದಲಾವಣೆ ತರಬೇಕು. ಮಕ್ಕಳ ಸುರಕ್ಷತೆ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಇದು ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೇಳಿದರು.’
3ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಸುರೇಂದ್ರ ಜಿ. ಅವರು ಮಾತನಾಡಿ, ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಹಾಗೂ ಅವರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಶಿಕ್ಷಕರು ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ, ವರ್ತನೆ, ಹಾಜರಾತಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಇದ್ದಕ್ಕಿದ್ದಂತೆ ಕಂಡುಬರುವ ಬದಲಾವಣೆಗಳನ್ನು ಶಿಕ್ಷಕರು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಸಲಹೆ ನೀಡಿದರು.
ಮಕ್ಕಳು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮುಂದಾದಾಗ ಶಿಕ್ಷಕರು ಅವರು ಹೇಳುವ ಪ್ರತಿಯೊಂದು ವಿಚಾರವನ್ನೂ ತಾಳ್ಮೆಯಿಂದ ಆಲಿಸಿ, ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ವಾತಾವರಣ ನಿರ್ಮಿಸಬೇಕು ಮತ್ತು ಸಮಸ್ಯೆ ಎದುರಾದರೂ ಅದನ್ನು ಶಿಕ್ಷಕರೊಂದಿಗೆ ಮುಕ್ತವಾಗಿ ಹಂಚಿಕೊಳ್ಳುವಂತಹ ವಿಶ್ವಾಸದ ಸಂಬಂಧ ಬೆಳೆಸುವುದು ಅಗತ್ಯ ಎಂದು ಸಲಹೆ ನೀಡಿದರು.
ಮಕ್ಕಳು ದಿನದ ಹೆಚ್ಚಿನ ಸಮಯವನ್ನು ಶಾಲೆಯಲ್ಲಿಯೇ ಕಳೆಯುವುದರಿಂದ ಶಾಲೆಯ ವಾತಾವರಣ ಸುರಕ್ಷಿತ ಹಾಗೂ ಸ್ನೇಹಪರವಾಗಿರಬೇಕು. ಗುಡ್ ಟಚ್ ಮತ್ತು ಬ್ಯಾಡ್ ಟಚ್ ಕುರಿತು ನಿರಂತರ ಅರಿವು ಮೂಡಿಸುವುದು ಅತ್ಯಂತ ಮುಖ್ಯ. ಅಪಾಯಕಾರಿ ಸಂದರ್ಭಗಳಲ್ಲಿ ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನು ನಿರಂತರವಾಗಿ ಕಲಿಸಬೇಕು. ಮಕ್ಕಳಲ್ಲಿ ಉಂಟಾಗುವ ದೈಹಿಕ ಬದಲಾವಣೆಗಳು ಹಾಗೂ ಬೆಳವಣಿಗೆಗಳ ಕುರಿತು ಸರಳವಾಗಿ ತಿಳಿಸಿಕೊಡಬೇಕು ಎಂದು ನ್ಯಾಯಾಧೀಶರಾದ ಸುರೇಂದ್ರ ಜಿ. ಅವರು ಹೇಳಿದರು.
ಸರ್ಕಾರಿ ಅಭಿಯೋಜನಾ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ರುದ್ರಪ್ರಸನ್ನ ಅವರು ಮಾತನಾಡಿ, ಶಿಕ್ಷಕರಿಗೆ ಸಮಾಜದಲ್ಲಿ ವಿಶೇಷ ಹಾಗೂ ಗೌರವಯುತ ಸ್ಥಾನವಿದೆ. ಶಿಕ್ಷಕರನ್ನು ದೇವರ ಸ್ಥಾನದಲ್ಲಿ ಕಾಣಲಾಗುತ್ತದೆ. ಆದ್ದರಿಂದ ಶಿಕ್ಷಕರ ಕರ್ತವ್ಯ ಕೇವಲ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು, ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸುವುದಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳು ಎದುರಿಸುತ್ತಿರುವ ಆಂತರಿಕ ಸಮಸ್ಯೆಗಳು, ಮಾನಸಿಕ ಒತ್ತಡ ಹಾಗೂ ಆಘಾತಕಾರಿ ಅನುಭವಗಳ ಬಗ್ಗೆಯೂ ಗಮನಹರಿಸಬೇಕು ಎಂದು ಅಭಿಪ್ರಾಯಪಟ್ಟರು.
ಮಕ್ಕಳ ಬೆಳವಣಿಗೆಯಲ್ಲಿ ಸಮಸ್ಯೆಗಳು ಇದ್ದಲ್ಲಿ ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಪರಿಹಾರ ಕಲ್ಪಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಸಮಾಲೋಚನೆ ಹಾಗೂ ಆರೋಗ್ಯ ತಪಾಸಣೆ ವ್ಯವಸ್ಥೆ ಕಲ್ಪಿಸಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್ ಅವರು ಮಾತನಾಡಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ವಿಭಾಗದ ಜಿ.ಆರ್.ಅಜಯ್ ಅವರು ಸೈಬರ್ ಕ್ರೈಂ ಅಪರಾಧದ ಕುರಿತು ಮಾಹಿತಿ ನೀಡಿದರು. ಅಭಿಲಾಶ್ ಗೌಡ ಮೊಬೈಲ್ ಅಪ್ಲಿಕೇಶನ್ ಕುರಿತು ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಶಾಲೆಯ ಶಿಕ್ಷಕರುಗಳು ಇದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ವಂದಿಸಿದರು.