Kodagu

ಶಾಂತಿನಿಕೇತನ ಶಾಲೆಯಲ್ಲಿ ‘ಬೇಡ ಬ್ರೋ’ ಡ್ರಗ್ಸ್ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ

admincoorgdaily

ಶಾಂತಿನಿಕೇತನ ಶಾಲೆಯಲ್ಲಿ ‘ಬೇಡ ಬ್ರೋ’ ಡ್ರಗ್ಸ್ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ
ಸುಂಟಿಕೊಪ್ಪ: ಸುಂಟಿಕೊಪ್ಪ ಪೊಲೀಸ್ ಠಾಣೆ ವತಿಯಿಂದ ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯಲ್ಲಿ ಇಂದು ಕುಶಾಲನಗರ ವೃತ್ತದ ಸಿಪಿಐ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ‘ಬೇಡ ಬ್ರೋ’ (Beda Bro) ಅಭಿಯಾನ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಿಪಿಐ ದಿನೇಶ್ ಕುಮಾರ್ ಅವರು, ಮಾದಕ ವಸ್ತುಗಳ ವ್ಯಸನವು ವಿದ್ಯಾರ್ಥಿಗಳ ಆರೋಗ್ಯ, ವಿದ್ಯಾಭ್ಯಾಸ ಮತ್ತು ಭವಿಷ್ಯವನ್ನು ಸಂಪೂರ್ಣವಾಗಿ ಹಾಳುಮಾಡುವುದಲ್ಲದೆ, ಕುಟುಂಬ ಮತ್ತು ಸಮಾಜದ ಶಾಂತಿಯನ್ನು ಕದಡುತ್ತದೆ ಎಂದು ಎಚ್ಚರಿಸಿದರು. ಯಾರಾದರೂ ಮಾದಕ ವಸ್ತುಗಳಿಗೆ ಪ್ರೇರೇಪಿಸಿದರೆ ಧೈರ್ಯವಾಗಿ ‘ಬೇಡ ಬ್ರೋ’ ಎಂದು ನಿರಾಕರಿಸಿ, ಈ ಬಗ್ಗೆ ಪೋಷಕರು ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯ ಕುರಿತು ಪ್ರಾತ್ಯಕ್ಷಿಕೆ ಹಾಗೂ ವಿಡಿಯೋಗಳ ಮೂಲಕ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಲಾಯಿತು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಐಎಸ್‌ಐ (ISI) ಗುಣಮಟ್ಟದ ಹೆಲ್ಮೆಟ್ ಧರಿಸುವುದರಿಂದ ಮತ್ತು ಕಾರುಗಳಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಬಳಸುವುದರಿಂದ ಅಪಘಾತದ ಸಂದರ್ಭದಲ್ಲಿ ಪ್ರಾಣಾಪಾಯವನ್ನು ತಪ್ಪಿಸಬಹುದು ಎಂದು ತಿಳಿಸಲಾಯಿತು.
 ಹಾಗೆಯೇ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಇದು ಅಪಘಾತಗಳಿಗೆ ದಾರಿಮಾಡಿಕೊಡುತ್ತದೆ. ಅಪ್ರಾಪ್ತರು ವಾಹನ ಚಲಾಯಿಸಿ ಸಿಕ್ಕಿಬಿದ್ದಲ್ಲಿ ಪೋಷಕರಿಗೆ ಭಾರಿ ದಂಡ ಮತ್ತು ಕಾನೂನು ಶಿಕ್ಷೆಯಾಗುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ತಿಳಿಸಲಾಯಿತು.

ಈ ಜಾಗೃತಿ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರು, ಬೋಧಕ ವರ್ಗದವರು, ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.