ಹಾಕತ್ತೂರಿನಲ್ಲಿ ರಕ್ತದಾನ ಶಿಬಿರ: ಮಾನವೀಯ ಸೇವೆಗೆ ಕರೆ
admincoorgdaily

ಹಾಕತ್ತೂರು:ರಕ್ತದಾನದಿಂದ ಅಮೂಲ್ಯ ಜೀವ ಉಳಿಸಲು ಸಾಧ್ಯ ಎಂದು ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯ ಡಾ. ಕರುಂಬಯ್ಯ ಹೇಳಿದರು.
ಹಾಕತ್ತೂರು ಗ್ರಾಮ ಪಂಚಾಯಿತಿ, ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಹಾಗೂ ಕೊಡಗು ಜಿಲ್ಲಾ ಬ್ಲಡ್ ಡೋನರ್ಸ್ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ಹಾಕತ್ತೂರಿನಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನವು ಅತ್ಯಂತ ಮಹತ್ವದ ಮಾನವೀಯ ಸೇವೆಯಾಗಿದೆ. ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಸಂದರ್ಭ ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತದ ಅವಶ್ಯಕತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ರಕ್ತದಾನಿಗಳು ನೀಡುವ ರಕ್ತ ಜೀವ ಉಳಿಸಲು ಸಹಕಾರಿಯಾಗುತ್ತದೆ. ಆರೋಗ್ಯವಂತರು ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಮುಂದೆ ಬರಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದ ಹಾಕತ್ತೂರು ಗ್ರಾಮ ಪಂಚಾಯಿತಿ ಪಿಡಿಒ ಗೀತಾಂಜಲಿ ಅವರು, ಗ್ರಾಮೀಣ ಮಟ್ಟದಲ್ಲಿ ಇಂತಹ ಆರೋಗ್ಯಪರ ಕಾರ್ಯಕ್ರಮ ಆಯೋಜಿಸುವುದರಿಂದ ಜನರಲ್ಲಿ ಜಾಗೃತಿ ಮೂಡುವುದರ ಜೊತೆಗೆ ಅಗತ್ಯವಿರುವ ರೋಗಿಗಳಿಗೆ ನೆರವಾಗಲು ಸಾಧ್ಯವಾಗುತ್ತದೆ. ಸಂಜೀವಿನಿ ಒಕ್ಕೂಟದ ಸದಸ್ಯರು ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕೊಡಗು ಬ್ಲಡ್ ಡೋನರ್ಸ್ ಅಧ್ಯಕ್ಷ ಪಿ.ಪಿ. ಸುಕುಮಾರ್ ಮಾತನಾಡಿ, ರಕ್ತದಾನವು ಕೇವಲ ದಾನವಲ್ಲ, ಅದು ಮತ್ತೊಬ್ಬರ ಬದುಕಿನಲ್ಲಿ ಭರವಸೆಯ ಬೆಳಕು ಮೂಡಿಸುವ ಮಾನವೀಯ ಕಾರ್ಯವಾಗಿದೆ ಎಂದರು.
ವೇದಿಕೆಯಲ್ಲಿ ಕೊಡಗು ಬ್ಲಡ್ ಡೋನರ್ಸ್ ನಿರ್ದೇಶಕಿ ಶ್ರೀಮತಿ ಲೀಲಾವತಿ ಬಿ.ಜೆ, ಪಂಚಾಯತ್ ಸಿಬ್ಬಂದಿಗಳಾದ ಸುನೀತಾ, ಸೋವಿಯತ್, ಅಹಮದ್, ಸಂಜೀವಿನಿ ಒಕ್ಕೂಟದ ಸದಸ್ಯರು, ಕೊಡಗು ಬ್ಲಡ್ ಡೋನರ್ಸ್ ಕಾರ್ಯದರ್ಶಿ ಮೈಕಲ್ ವೇಗಸ್, ಉಪಾಧ್ಯಕ್ಷ ಹನೀಫ್, ಸದಸ್ಯ ಬಶೀರ್, ರಕ್ತದಾನಿಗಳು ಹಾಗೂ ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.
ಸಂಜೀವಿನಿ ಒಕ್ಕೂಟದ ಮುಖ್ಯ ಬರಹಗಾರ್ತಿ ಸೌಮ್ಯ ಸ್ವಾಗತಿಸಿದರು, ಸಮುದಾಯ ಸಂಪನ್ಮೂಲ ವ್ಯಕ್ತಿ ಹರಿಣಿ ವಂದಿಸಿದರು.