ಪಾಲಿಬೆಟ್ಟದಲ್ಲಿ ‘ಸ್ವಚ್ಛ ನಡಿಗೆ’ ಅಭಿಯಾನಕ್ಕೆ ಚಾಲನೆ
admincoorgdaily

ಸಿದ್ದಾಪುರ:ಕೊಡಗು ಜಿಲ್ಲಾ ಪರಿಸರ ಸಂರಕ್ಷಣಾ ಹೋರಾಟ ಸಮಿತಿ, ಸಂತ ಅನ್ನಮ್ಮ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕ, ಕಾವೇರಿ ಕಾಲೇಜು, ವಿರಾಜಪೇಟೆಯ ಎನ್.ಎಸ್.ಎಸ್ ಘಟಕ, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಡೆದ "ಸ್ವಚ್ಛ ನಡಿಗೆ" ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ವಿರಾಜಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಉದ್ಘಾಟಿಸಿ ಮಾತನಾಡಿ, ಕೊಡಗು ಜಿಲ್ಲೆ ಸ್ವಚ್ಛತೆ ಮತ್ತು ಸೈಮಲ್ಯಕ್ಕೆ ಹೆಸರುವಾಸಿಯಾಗಿದೆ. ಜಿಲ್ಲೆಯ ಈ ಹೆಗ್ಗಳಿಕೆಯನ್ನು ಉಳಿಸಿಕೊಂಡು ಪರಿಸರವನ್ನು ಸ್ವಚ್ಛವಾಗಿ ಹಾಗೂ ಸುಂದರವಾಗಿ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಪಾಲಿಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭಿಸಿರುವ ‘ಸ್ವಚ್ಛ ನಡಿಗೆ’ ಅಭಿಯಾನವನ್ನು ಮುಂಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೂ ವಿಸ್ತರಿಸಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಕೈಗೊಳ್ಳಲಾಗುವುದು ಎಂದು ಆಶಯ ವ್ಯಕ್ತಪಡಿಸಿದರು.
ಅಭಿಯಾನದ ಅಂಗವಾಗಿ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಹಾಗೂ ಕಾವೇರಿ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳು, ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಪಾಲಿಬೆಟ್ಟ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲಿಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಎಸೆಯಲಾಗಿರುವ ಕಸವನ್ನು ಸ್ಥಳಾಂತರಿಸಿದರು.
ಈ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಜಿ.ಪಂ ಮಾಜಿ ಸದಸ್ಯ ವಿಜು ಸುಬ್ರಮಣಿ, ಗ್ರಾ.ಪಂ ಆಡಳಿತಾಧಿಕಾರಿ ಗೌರಿ, ಅಭಿವೃದ್ಧಿ ಅಧಿಕಾರಿ ಪ್ರಮೋದ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಹಾಜರಿದ್ದರು.