ಕಡಂಗ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ
admincoorgdaily

ನಾಪೋಕ್ಲು :ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ 2026-27ನೇ ಸಾಲಿನ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವು ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.
ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಭವ್ಯ ವಹಿಸಿದ್ದರು.
ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಹಾಗೂ ವೇದಿಕೆಯಲ್ಲಿದ್ದ ಗಣ್ಯರು ಉದ್ಘಾಟಿಸಿದರು.
ಸಮೂಹ ಸಂಪನ್ಮೂಲ ವ್ಯಕ್ತಿ (ಸಿಆರ್ ಪಿ)ಪವಿತ್ರ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸುವುದರೊಂದಿಗೆ ಅಗತ್ಯ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವ ಮೂಲಕ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿ ಭವಿಷ್ಯದ ಸಾಧಕರನ್ನಾಗಿ ರೂಪಿಸುವಲ್ಲಿ ಪ್ರತಿಭಾ ಕಾರಂಜಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ನಿವೃತ್ತ ಸೈನಿಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಅಬ್ದುಲ್ ಸಲಾಂ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳು ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಕರೆ ನೀಡಿದರು.
ಪಾರಾಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕಿಶೋರ್ ಕುಮಾರ್ ಹಾಗೂ ಅತಿಥಿಗಳಾದ ಕಣಿಯರ ಪ್ರಕಾಶ್ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಸ್ಪರ್ಧೆಗಳು ಪೂರ್ಣಗೊಂಡ ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಹೇಮಾವತಿ,ಎಸ್ ಡಿಎಂ ಸಿ ಸದಸ್ಯ ಗಫೂರ್ ಕ್ಲಸ್ಟರ್ ವ್ಯಾಪ್ತಿಯ ಹಿರಿಯ,ಕಿರಿಯ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಅತಿಥಿ ಶಿಕ್ಷಕರು,ವಿದ್ಯಾರ್ಥಿಗಳು, ಕಡಂಗ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.