Kodagu

ಪೊನ್ನಂಪೇಟೆ ಕೆಪಿಎಸ್ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

admincoorgdaily

ಪೊನ್ನಂಪೇಟೆ ಕೆಪಿಎಸ್ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಪೊನ್ನಂಪೇಟೆ, ನ. 12: ಖಾಸಗಿ ಶಾಲೆಗಳ ಬದಲು ಸರ್ಕಾರಿ ಶಾಲೆಗಳತ್ತ ಪೋಷಕರು ಹಾಗೂ ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಶಿಕ್ಷಕರು ವಿಶೇಷ ಪ್ರಯತ್ನ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ್ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ, ವಿರಾಜಪೇಟೆ ತಾಲ್ಲೂಕು ಹಾಗೂ ಸಮೂಹ ಸಂಪನ್ಮೂಲ ಕೇಂದ್ರ, ಪೊನ್ನಂಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ಪೊನ್ನಂಪೇಟೆ ಕೆಪಿಎಸ್ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಹಲವು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಶಿಕ್ಷಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಮೊದಲಿಗೆ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಅತಿಥಿಗಳು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕ್ಷೇತ್ರ ಸಮನ್ವಯಾಧಿಕಾರಿ ಕಳಕಂಡ ಮಹೇಶ್ ಮಾತನಾಡಿ, ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದೇ ಪ್ರತಿಭಾ ಕಾರಂಜಿಯ ಉದ್ದೇಶವಾಗಿದೆ. ಪ್ರತಿಯೊಬ್ಬ ಮಗುವಿನಲ್ಲಿಯೂ ವಿಭಿನ್ನ ಪ್ರತಿಭೆಗಳಿದ್ದು, ಅವುಗಳನ್ನು ಅನಾವರಣಗೊಳಿಸಲು ಈ ವೇದಿಕೆ ಉತ್ತಮ ಅವಕಾಶ ಕಲ್ಪಿಸುತ್ತದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆ ಮಾಡಬೇಕು. ತೀರ್ಪುಗಾರರು ಯಾವುದೇ ಪೂರ್ವಾಗ್ರಹವಿಲ್ಲದೆ ನ್ಯಾಯಯುತ ತೀರ್ಪು ನೀಡಬೇಕು ಎಂದರು.

ಮುಖ್ಯ ಶಿಕ್ಷಕ ಬಿ.ಎಂ. ವಿಜಯ್ ಮಾತನಾಡಿ, ಒಂದನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳಲ್ಲಿ ವಿವಿಧ ಪ್ರತಿಭೆಗಳಿದ್ದು, ಅವುಗಳನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಮಕ್ಕಳು ಯಾವುದೇ ಅಂಜಿಕೆಯಿಲ್ಲದೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಹಾರೈಸಿದರು.

ಎಸ್‌ಡಿಎಂಸಿ ಅಧ್ಯಕ್ಷ ಜುನೈದ್ ಸಿ.ಎ. ಮಾತನಾಡಿ, ಕಲೆ ದೇವರ ವರದಾನವಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡರೆ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದರು.

ಎಸ್‌ಡಿಎಂಸಿ ಉಪಾಧ್ಯಕ್ಷೆ ನಾಗವೇಣಿ ಮಾತನಾಡಿ, ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ನಾಡಿನ ಸಂಸ್ಕೃತಿ, ಕಲೆ ಹಾಗೂ ಸಾಹಿತ್ಯವನ್ನು ಉಳಿಸಿ ಬೆಳೆಸಬೇಕು ಎಂದು ತಿಳಿಸಿದರು.

ತಾಲ್ಲೂಕಿನ ಐದು ಕ್ಲಸ್ಟರ್‌ಗಳ 14 ಶಾಲೆಗಳ ವಿದ್ಯಾರ್ಥಿಗಳು ಛದ್ಮವೇಷ, ನೃತ್ಯ, ಭಾಷಣ, ಮಣ್ಣಿನ ಆಕೃತಿ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.

ಸಿ ಆರ್ ಪಿ ವಾಸುವರ್ಮ ಸ್ವಾಗತಿಸಿದರು. ದೈಹಿಕ ಶಿಕ್ಷಕ ಮಹೇಶ್ ನಿರೂಪಿಸಿದರು. ಸಹಶಿಕ್ಷಕಿ ಐ.ಎಂ. ರೋಜಿ ವಂದಿಸಿದರು.

ಈ ಸಂದರ್ಭ ಬಿಆರ್‌ಪಿ ವಾಮನ, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಮಕೃಷ್ಣ, ಶಿಕ್ಷಕರಾದ ಶಕೀಲಾ ಭಾನು, ಶಾಹಿದಾ, ಗಂಗಾಮಣಿ, ರೋಜಿ, ಮಹೇಶ್, ನಿಂಗರಾಜ್, ವೆಂಕಟೇಶ್, ದಾಕ್ಷಾಯಿಣಿ, ವಿನಿತಾ, ಸಂತೋಷ್ ಲೋಬೊ, ಮಂಜುಳಾ, ರೇಖಾ, ಪೂರ್ಣಿಮಾ, ಅತಿಥಿ ಶಿಕ್ಷಕರಾದ ನಸಿಯತ್, ದಕ್ಷ, ಸಂತೋಷ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.