ಕಾರ್ಮಾಡುವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ; ಸಂಘಟನೆಗೆ ಶಾಸಕ ಪೊನ್ನಣ್ಣ ಕರೆ
admincoorgdaily

ಪೊನ್ನಂಪೇಟೆ: ಕಾರ್ಮಾಡು ವಲಯದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿ ಮಾತನಾಡಿದರು.
ಸಭೆಯಲ್ಲಿ ಮೊದಲಿಗೆ ಕಾರ್ಯಕರ್ತರ ಅಭಿಪ್ರಾಯ, ಅನಿಸಿಕೆ ಹಾಗೂ ಬೇಡಿಕೆಗಳನ್ನು ಆಲಿಸಿದ ಶಾಸಕರು, ಮುಂಬರುವ ಚುನಾವಣೆಗಳನ್ನು ಎದುರಿಸಲು ಈಗಿನಿಂದಲೇ ಸಂಘಟಿತವಾಗಿ ಸಜ್ಜಾಗುವಂತೆ ಕರೆ ನೀಡಿದರು.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಾಗೂ ತಮ್ಮ ಅನುದಾನದ ಮೂಲಕ ಈ ಭಾಗಕ್ಕೆ ಒದಗಿಸಿರುವ ಅನುದಾನ, ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಪರ ಯೋಜನೆಗಳ ಮಾಹಿತಿಯನ್ನು ಮನೆಮನೆಗೆ ತಲುಪಿಸುವಂತೆ ತಿಳಿಸಿದರು. ಅಲ್ಲದೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಮತ್ತು ಮಹತ್ವವನ್ನು ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಡುವ ಮೂಲಕ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಪಕ್ಷದ ಸಂಘಟನೆಯ ಬಲವೇ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಶಕ್ತಿ ಎಂಬ ಆಶಯದೊಂದಿಗೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದರು.
ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಿರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್, ಭಾಗಮಂಡಲ ಹಾಗೂ ತಲಾಕಾವೇರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಬಾನಂಡ ಪ್ರತ್ಯು, ಜಿಲ್ಲಾ ವಕ್ತಾರ ಟಾಟು ಮೊಣ್ಣಪ್ಪ, ಬಾಳಲೆ ಪಂಚಾಯತ್ ಮಾಜಿ ಸದಸ್ಯ ಅದೆಂಗಡ ವಿನು ಉತ್ತಪ್ಪ, ಪವನ್ ಚಿಟ್ಟಿಯಪ್ಪ, ತಾರ ಅಯ್ಯಮ್ಮ, ಸುಬ್ಬಯ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು.