Kodagu

ಹದಗೆಟ್ಟ ರಸ್ತೆಗಳ ದುರಸ್ತಿಗೆ ಒತ್ತಾಯಿಸಿ ಸಿಪಿಐ(ಎಂ) ಪ್ರತಿಭಟನೆ

admincoorgdaily

ಹದಗೆಟ್ಟ ರಸ್ತೆಗಳ ದುರಸ್ತಿಗೆ ಒತ್ತಾಯಿಸಿ ಸಿಪಿಐ(ಎಂ) ಪ್ರತಿಭಟನೆ
ಸಿದ್ದಾಪುರ: 
ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿನ ಹದಗೆಟ್ಟ ರಸ್ತೆಗಳು ಹಾಗೂ ಸಿದ್ದಾಪುರ ಪಟ್ಟಣದ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ತಕ್ಷಣ ದುರಸ್ತಿಪಡಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಸಿದ್ದಾಪುರ ಸಂಚಾಲನ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಿದ್ದಾಪುರದಿಂದ ನೆಲ್ಯಹುದಿಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಹಳೆ ಸಿದ್ದಾಪುರದಿಂದ ವಿರಾಜಪೇಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸೇರಿದಂತೆ ಗ್ರಾಮೀಣ ಭಾಗದ ಹಲವು ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ನಿತ್ಯ ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ರಸ್ತೆಗಳಲ್ಲಿರುವ ದೊಡ್ಡ ಗುಂಡಿಗಳಿಂದ ಅಪಘಾತ ಸಂಭವಿಸುವ ಆತಂಕವೂ ಎದುರಾಗಿದೆ.

ಮಳೆಗಾಲದಲ್ಲಿ ರಸ್ತೆಗಳ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು, ವೃದ್ಧರು ಹಾಗೂ ರೋಗಿಗಳು ಸಂಚರಿಸಲು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ರಸ್ತೆ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಂತರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಉದ್ದೇಶಿಸಿ ಸಿದ್ಧಪಡಿಸಿದ ಮನವಿ ಪತ್ರವನ್ನು ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಸಲ್ಲಿಸಲಾಯಿತು ರಸ್ತೆ ದುರಸ್ತಿ ಕಾಮಗಾರಿಯನ್ನು ವಿಳಂಬ ಮಾಡದೆ ತಕ್ಷಣ ಕೈಗೆತ್ತಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಸಿಪಿಐ(ಎಂ) ಪಕ್ಷದ ಕಾರ್ಯದರ್ಶಿ ಸಿದ್ದಾಪುರದ ಎನ್.ಡಿ. ಕುಟ್ಟಪ್ಪ, ಸಿ.ಎಂ. ಮುಸ್ತಫ, ಹೆಚ್.ಬಿ. ರಮೇಶ್, ಸಿ.ಪಿ. ಮುಯ್ದು, ಎಕ್ಸ್.ಟಿ. ಸಾಲಿ, ಪೌಲೋಸ್, ಎಸ್. ಬೈಜು, ಎನ್.ಕೆ. ಅನಿಲ್ ಕುಟ್ಟಪ್ಪ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.