Kodagu

ಬೆಲೆ ಏರಿಕೆ ವಿರುದ್ಧ ಸಿಪಿಎಂ ಪಕ್ಷದಿಂದ ಪ್ರತಿಭಟನೆ; ಹಾಲು, ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಖಂಡನೆ

admincoorgdaily

ಬೆಲೆ ಏರಿಕೆ ವಿರುದ್ಧ ಸಿಪಿಎಂ ಪಕ್ಷದಿಂದ ಪ್ರತಿಭಟನೆ; ಹಾಲು, ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಖಂಡನೆ
ಸಿದ್ದಾಪುರ :
ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರ ನಡುವೆ ರಾಜ್ಯ ಸರ್ಕಾರ ಹಾಲಿನ ದರ ಹಾಗೂ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಸಿಪಿಎಂ ಪಕ್ಷದ ನೆಲ್ಯಹುದಿಕೇರಿ ಘಟಕದ ವತಿಯಿಂದ ಇಲ್ಲಿನ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಬೆಲೆ ಏರಿಕೆಯಿಂದ ಬಡವರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಸಿಪಿಎಂ ಮುಖಂಡ ಪಿ.ಆರ್. ಭರತ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರು ಹಾಗೂ ಬಡ ವರ್ಗದವರ ಗಾಯದ ಮೇಲೆ ಬರೆ ಎಳೆಯುತ್ತಾ ಜನರ ಸಂಕಷ್ಟವನ್ನು ನಿರ್ಲಕ್ಷಿಸುತ್ತಿವೆ ಎಂದು ಆರೋಪಿಸಿದರು. ದಿನಬಳಕೆಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಸಾಮಾನ್ಯ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಗಳು ಜನರಿಗೆ ನೆರವಾಗುವ ಬದಲು ಮತ್ತಷ್ಟು ಹೊರೆ ಹೇರುತ್ತಿರುವುದು ಖಂಡನೀಯ ಎಂದರು.

ಬೆಲೆ ಏರಿಕೆಯ ನೆಪವೊಡ್ಡಿ ಅಂಗಡಿ ಮಾಲೀಕರು ಹಾಗೂ ಆಟೋ ಚಾಲಕರು ಜನಸಾಮಾನ್ಯರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದರ ಬದಲು, ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಏಕೆ ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಜನರ ಸಮಸ್ಯೆಗಳ ಬಗ್ಗೆ ಎಲ್ಲರೂ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕಾದ ಅಗತ್ಯವಿದೆ ಎಂದು ಹೇಳಿದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಜನಸ್ನೇಹಿ ಯೋಜನೆಗಳನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನೀತಿಗಳನ್ನೇ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಅನುಸರಿಸುತ್ತಿದ್ದು, ಇದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಟೀಕಿಸಿದರು. ಸರ್ಕಾರಗಳು ಕೂಡಲೇ ಬೆಲೆ ಏರಿಕೆಯನ್ನು ನಿಯಂತ್ರಿಸಿ ಜನಸಾಮಾನ್ಯರ ಬದುಕಿಗೆ ಅನುಕೂಲವಾಗುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಚ್.ಬಿ. ರಮೇಶ್, ಜಿಲ್ಲಾ ಮುಖಂಡ ಜೋಸ್, ಸಿಪಿಎಂ ನೆಲ್ಯಹುದಿಕೇರಿ ಪಟ್ಟಣ ಕಾರ್ಯದರ್ಶಿ ಟಿ.ಟಿ. ಉದಯಕುಮಾರ್, ಸ್ಥಳೀಯ ಮುಖಂಡರಾದ ಯೋಸಫ್, ಹಬೀಬ್, ಚಂದ್ರ, ರವಿ, ಭೋಜಿ, ಮುಸ್ತಫ, ದಿಲೀಪ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.