Kodagu

ಕುಶಾಲನಗರ ತಾಲ್ಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ

admincoorgdaily

ಕುಶಾಲನಗರ ತಾಲ್ಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ
ತೊರೆನೂರು: ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಭಾನುವಾರ ತೊರೆನೂರು ಸೊಸೈಟಿ (PACS) ವಾರ್ಷಿಕ ಮಹಾಸಭೆ ಅಧ್ಯಕ್ಷ ಟಿ.ಬಿ.ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಳೆ ಕೊರತೆಯಿಂದ ಮುಸುಕಿನ ಜೋಳ ಸೇರಿದಂತೆ ಬೆಳೆಗಳು ಒಣಗುತ್ತಿದ್ದು ರೈತರು ಸಂಕಷ್ಟದಲ್ಲಿದ್ದಾರೆ ಎಂದು ಚರ್ಚಿಸಲಾಯಿತು.

ಸಂಘದ ಸದಸ್ಯ ಟಿ.ಜಿ.ಪ್ರೇಮಕುಮಾರ್ ಅವರು ಬರಪೀಡಿತ ಘೋಷಣೆಯ ವಿಷಯ ಪ್ರಸ್ತಾಪಿಸಿದಾಗ, ನೆರೆದಿದ್ದ ರೈತರು ಒಕ್ಕೊರಲಿನಿಂದ ಬೆಂಬಲಿಸಿ ನಿರ್ಣಯ ಅಂಗೀಕರಿಸಿದರು.

ಈ ಕುರಿತು ಶಾಸಕರು, ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಜೊತೆಗೆ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಿ ವಿರೋಧ ವ್ಯಕ್ತಪಡಿಸಲಾಯಿತು.