Kodagu

ವಿಕಸಿತ ಭಾರತ ಯುವ ಸಂಸತ್ತು ಕಾರ್ಯಕ್ರಮ ಯುವಜನರಲ್ಲಿ ಸಂಸದೀಯ ವ್ಯವಸ್ಥೆ ಹಾಗೂ ರಾಷ್ಟ್ರ ನಿರ್ಮಾಣದ ಕುರಿತು ಅರಿವು

admincoorgdaily

ವಿಕಸಿತ ಭಾರತ ಯುವ ಸಂಸತ್ತು ಕಾರ್ಯಕ್ರಮ  ಯುವಜನರಲ್ಲಿ ಸಂಸದೀಯ ವ್ಯವಸ್ಥೆ ಹಾಗೂ ರಾಷ್ಟ್ರ ನಿರ್ಮಾಣದ ಕುರಿತು ಅರಿವು
ಮಡಿಕೇರಿ:-ಯುವಜನರಲ್ಲಿ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಗರದಲ್ಲಿ ‘ವಿಕಸಿತ ಭಾರತ ಯುವ ಸಂಸತ್ತು’ ಕಾರ್ಯಕ್ರಮವು ನಡೆಯಿತು.

ಭಾರತ ಸರ್ಕಾರ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ಕೇಂದ್ರ ಕೊಡಗು ಹಾಗೂ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಯುವ ನಾಯಕರು ಭಾಗವಹಿಸಿ, ರಾಷ್ಟ್ರದ ಅಭಿವೃದ್ಧಿ ಮತ್ತು ಸಮಕಾಲೀನ ವಿಚಾರಗಳ ಕುರಿತು ತಮ್ಮ ಅಭಿಪ್ರಾಯ ಮಂಡಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್ ಅವರು, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವುದು ಪ್ರಧಾನಮಂತ್ರಿಯವರ ಆಶಯವಾಗಿದೆ. ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ಈ ಕನಸು ನನಸಾಗಬೇಕಾದರೆ ಯುವಜನರು ರಾಷ್ಟ್ರದ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕು ಎಂದರು.

ಯೌವನವೆಂಬುದು ಕೇವಲ ವಯಸ್ಸಿಗೆ ಸಂಬಂಧಿಸಿದ್ದಲ್ಲ, ಅದೊಂದು ಮನೋಭಾವವಾಗಿದೆ. ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರೊಂದಿಗೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿ, ನಡವಳಿಕೆಯನ್ನು ಸುಧಾರಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು. ಪೋಷಕರು ಹಾಗೂ ಸರ್ಕಾರ ಒದಗಿಸುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ, ಕ್ರೀಡೆ ಮತ್ತು ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾಲೇಜಿನಲ್ಲಿ ಅಗತ್ಯ ಸೌಲಭ್ಯ ಮತ್ತು ಪ್ರೋತ್ಸಾಹ ಒದಗಿಸಲಾಗುವುದು ಎಂದು ತಿಳಿಸಿದರು.

ಮೈ ಭಾರತ್ ಕೊಡಗು ಜಿಲ್ಲಾ ಯುವಜನ ಅಧಿಕಾರಿ ಪಿ.ಅಖಿಲ್ ಅವರು ಮಾತನಾಡಿ, ಯುವಜನರ ಸಹಭಾಗಿತ್ವದಲ್ಲಿ ರಾಷ್ಟ್ರ ನಿರ್ಮಾಣಕ್ಕೆ ಹೊಸ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಭಾರತ ಸರ್ಕಾರವು ‘ಮೇರಾ ಯುವ ಭಾರತ್’ ಪರಿಕಲ್ಪನೆಯನ್ನು ಜಾರಿಗೊಳಿಸಿದೆ. ಇದರಡಿ ರಾಷ್ಟ್ರ ನಿರ್ಮಾಣ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಜ್ಞಾನ, ಕ್ರೀಡೆ ಹಾಗೂ ಭಾಷಣ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳು ಮತ್ತು ಯುವಜನರ ಆಲೋಚನೆಗಳನ್ನು ಸಂಗ್ರಹಿಸಲಾಗುತ್ತಿದೆ. ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಸ್ಪರ್ಧಿಗಳು 2027ರ ಜನವರಿ 10 ರಿಂದ 12 ರವರೆಗೆ ನವದೆಹಲಿಯ ಸಂಸತ್ತಿನಲ್ಲಿ ತಮ್ಮ ಆಲೋಚನೆಗಳನ್ನು ಮಂಡಿಸಲು ಅವಕಾಶ ಪಡೆಯಲಿದ್ದಾರೆ ಎಂದರು.

ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಿ, ಗುರು-ಹಿರಿಯರು ಹಾಗೂ ಶಿಕ್ಷಕರನ್ನು ಗೌರವಿಸಬೇಕು. ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣವು ಜೀವನದಲ್ಲಿ ಎಂದಿಗೂ ಕೈಬಿಡದ ಆಸ್ತಿಯಾಗಿದ್ದು, ಯಾವುದೇ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ಶಿಕ್ಷಣ ಅತ್ಯಂತ ಮುಖ್ಯವಾಗಿದೆ ಎಂದರು.
ಇಂದಿನ ವಿದ್ಯಾರ್ಥಿಗಳು ಹಾಗೂ ಯುವಜನರು ದೇಶದ ಭವಿಷ್ಯದ ಹೊಣೆಗಾರಿಕೆಯನ್ನು ಅರಿತು ರಾಷ್ಟ್ರದ ರಕ್ಷಣೆ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಸಮಾಜಕ್ಕೆ ಅಗತ್ಯವಾದ ಮಾಹಿತಿಯನ್ನು ಜನರಿಗೆ ತಲುಪಿಸುವ ಕಾರ್ಯದಲ್ಲಿಯೂ ಯುವಕರು ತೊಡಗಿಸಿಕೊಳ್ಳಬೇಕು. ನಶಾಮುಕ್ತ ಭಾರತ ಮತ್ತು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣದ ಅಗತ್ಯವನ್ನು ವಿವರಿಸಿದ ಅವರು, ಆರೋಗ್ಯದ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ವಕೀಲರಾದ ಕೆ.ಎಂ.ಮೀನಾಕುಮಾರಿ ಅವರು ಮಾತನಾಡಿ, ಸ್ಪರ್ಧೆಯಲ್ಲಿ ಗೆಲುವು ಅಥವಾ ಸೋಲು ಮುಖ್ಯವಲ್ಲ, ಭಾಗವಹಿಸುವಿಕೆ ಅತ್ಯಂತ ಮುಖ್ಯ. ಇಂದಿನ ಪೀಳಿಗೆಯ ಸಬಲೀಕರಣ ಹಾಗೂ ಭವಿಷ್ಯದ ರಾಷ್ಟ್ರ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನದೇ ಆದ ದೃಷ್ಟಿಕೋನ ಮತ್ತು ವಿಶೇಷ ಸಾಮಥ್ರ್ಯ ಹೊಂದಿರುತ್ತಾನೆ. ಇಂತಹ ವೇದಿಕೆಗಳು ವಿದ್ಯಾರ್ಥಿಗಳಲ್ಲಿರುವ ಆಲೋಚನೆ ಹಾಗೂ ಪ್ರತಿಭೆ ಹೊರತರುವಲ್ಲಿ ಸಹಕಾರಿಯಾಗುತ್ತವೆ ಎಂದರು.

ತೀರ್ಪುಗಾರರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ನವೀನ್ ಕುಮಾರ್, ಆಂಗ್ಲ ಉಪನ್ಯಾಸಕಿ ಅನನ್ಯ ಮಧುಸೂದನ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಿಂದಿ ಉಪನ್ಯಾಸಕಿ ಕೆ.ಎಚ್. ಖುರ್ಷಿದಾ ಬಾನು ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಎಂ.ಬಿ.ದೀಪ ಕಾರ್ಯನಿರ್ವಹಿಸಿದರು.

ಸ್ಪರ್ಧೆಯಲ್ಲಿ ಪೊನ್ನಂಪೇಟೆಯ ಸಿಐಟಿ ಕಾಲೇಜಿನ ವಿದ್ಯಾರ್ಥಿನಿ ಅದ್ವಿಕಾ ಪ್ರಥಮ ಸ್ಥಾನ ಗಳಿಸಿದರೆ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವಿದ್ಯಾರ್ಥಿನಿ ಎಂ.ಐ.ಶಬೀಬ ದ್ವಿತೀಯ ಹಾಗೂ ಪೊನ್ನಂಪೇಟೆಯ ಸಿಐಟಿ ಕಾಲೇಜಿನ ಕೆ.ಆರ್. ಬವಿತ ತೃತೀಯ ಸ್ಥಾನ ಪಡೆದು, ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ವಿ.ವಿ.ಶಿವಪ್ಪ ನಿರೂಪಿಸಿದರು. ಕನ್ನಡ ಉಪನ್ಯಾಸಕಿ ಕೆ. ಪೂರ್ಣಿಮಾ ಸ್ವಾಗತಿಸಿದರು. ಉಪನ್ಯಾಸಕಿ ಪಿ.ಆರ್. ಮುಕ್ತಕೇಶಿ ವಂದಿಸಿದರು.