Kodagu

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ

admincoorgdaily

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ
ಮಡಿಕೇರಿ, ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ ದಾಳಿ ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ಕ್ರಮವಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಸಂಚಾಲಕ ಜೆ.ಎಲ್. ಜನಾರ್ಧನ್ ಆರೋಪಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ದಲಿತ ಸಮುದಾಯದ ಪ್ರಮುಖ ಜನನಾಯಕರಾಗಿರುವ ಸತೀಶ್ ಜಾರಕಿಹೊಳಿ ಅವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ ED ದಾಳಿ ನಡೆಸಲಾಗಿದೆ ಎಂದು ದೂರಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ದಲಿತರು, ಹಿಂದುಳಿದವರು ಹಾಗೂ ಹೋರಾಟಗಾರರನ್ನು ಸಂಘಟಿಸುವ ಕಾರ್ಯ ನಡೆಯುತ್ತಿದ್ದು, ಅವರ ರಾಜಕೀಯ ಮತ್ತು ಸಾಮಾಜಿಕ ಸಂಘಟನಾ ಚಟುವಟಿಕೆಗಳನ್ನು ಕುಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದು ನಮ್ಮ ಆರೋಪವಾಗಿದೆ ಎಂದು ಜನಾರ್ಧನ್ ತಿಳಿಸಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಅವರ ವ್ಯವಹಾರಗಳು ಕಾನೂನುಬದ್ಧವಾಗಿವೆ ಎಂದು ಅವರು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ, ಅಂತರರಾಷ್ಟ್ರೀಯ ಹೂಡಿಕೆ ಹಾಗೂ ವ್ಯವಹಾರಗಳಿಗೆ ಸಂಬಂಧಿಸಿದಂತೆ ED ನಡೆಸುತ್ತಿರುವ ತನಿಖೆ ಮತ್ತು ದಾಳಿಯ ಹಿಂದೆ ರಾಜಕೀಯ ಉದ್ದೇಶವಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ ಸಚಿವ ನಾಗೇಂದ್ರ ಅವರ ವಿರುದ್ಧ ಹಾಗೂ ಇದೀಗ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ED ದಾಳಿ ನಡೆದಿರುವುದನ್ನು ಉಲ್ಲೇಖಿಸಿರುವ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ನಾಯಕರನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರವು ED ಸೇರಿದಂತೆ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿರುವುದನ್ನು ಜನರು ಸಹಿಸುವುದಿಲ್ಲ. ಸತೀಶ್ ಜಾರಕಿಹೊಳಿ ಅವರ ಪರವಾಗಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಿಲ್ಲಲಿದ್ದು, ಕೊಡಗು ಮಾನವ ಬಂಧುತ್ವ ವೇದಿಕೆ ಮತ್ತು ಕಾಂಗ್ರೆಸ್ ವತಿಯಿಂದ ಈ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು ಮತ್ತು ಸಂಘಟನಾ ಚಟುವಟಿಕೆಗಳನ್ನು ಕುಂಠಿತಗೊಳಿಸುವ ಉದ್ದೇಶದಿಂದಲೇ ಈ ದಾಳಿ ನಡೆದಿದೆ ಎಂದು ಜನಾರ್ಧನ್ ಆರೋಪಿಸಿದ್ದಾರೆ.