Kodagu

ಕನ್ನಡ ಭಾಷೆಯ ಬಳಕೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಲಿ; ಮಂಜುನಾಥ್

admincoorgdaily

ಕನ್ನಡ ಭಾಷೆಯ ಬಳಕೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಲಿ; ಮಂಜುನಾಥ್
ಸಿದ್ದಾಪುರ:-
ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಕನ್ನಡಾಭಿಮಾನ ಕೇವಲ ಮಾತಿಗೆ ಸೀಮಿತವಾಗದೆ ನಿತ್ಯ ಜೀವನದಲ್ಲೂ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡುವ ಮೂಲಕ ಅಭಿಮಾನ ಪ್ರದರ್ಶಿಸಬೇಕು ಎಂದು ಕಸಾಪ ಅಮ್ಮತ್ತಿ ಹೋಬಳಿ ಅಧ್ಯಕ್ಷ ಟಿ.ಎಚ್. ಮಂಜುನಾಥ್ ಹೇಳಿದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಿದ್ದಾಪುರ ಪಟ್ಟಣದ ಆಟೋ ರಿಕ್ಷಾ ನಿಲ್ದಾಣದಲ್ಲಿ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಸ್ವಾಭಿಮಾನಿ ಬಣ, ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘ, ಮಹಿಳಾ ಸಂಜೀವಿನಿ ಒಕ್ಕೂಟ ಹಾಗೂ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಇದೇ ಸಂದರ್ಭ ಹತ್ತನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 123 ಅಂಕ ಗಳಿಸಿ ಸಾಧನೆ ಮಾಡಿದ ಕುಮಾರಿ ವಿಜಯಲಕ್ಷ್ಮಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣದ ವತಿಯಿಂದ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು

ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಭಾವ ಮಾಲ್ದಾರೆ, ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್, ಕರವೇ ಶಿವರಾಮೇಗೌಡರ ಬಣದ ಸಂತೋಷ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ತುಳಸಿ ಗಣಪತಿ, ತಲೆಹೊರೆ ಕಾರ್ಮಿಕರ ಸಂಘದ ಅಧ್ಯಕ್ಷ ಅಯ್ಯಪ್ಪ, ಆಟೋ ಚಾಲಕರ ಸಂಘದ ಪ್ರಮುಖರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.