Kodagu

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

admincoorgdaily

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ
ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ವಿರಾಜಪೇಟೆ ತಾಲೂಕು, ಮಾಯಮುಡಿ ವಲಯದ ವತಿಯಿಂದ ಮಡಿಕೆಬೀಡಿನ ಬಿಂದು ಅವರ ಮನೆಯ ಆವರಣದಲ್ಲಿ ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ನಡೆಯಿತು.

  ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಕೃಷಿ ಮಾರುಕಟ್ಟೆ ಮಂಡಳಿಯ ಪ್ರಧಾನ ಸಂಚಾಲಕರಾದ ವಿ.ಎಸ್.ಬಿ. ಭಾಗ್ಯಲಕ್ಷ್ಮಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ರೈತರು ತಂತ್ರಜ್ಞಾನವನ್ನು ಕೃಷಿ ಮಾರುಕಟ್ಟೆಯಲ್ಲಿ ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ತಮ್ಮ ಕೃಷಿ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಹಾಗೂ ಸೂಕ್ತ ಬೆಲೆ ಪಡೆಯಬಹುದು ಎಂದು ತಿಳಿಸಿದರು.
  ಅಲ್ಲದೆ, ರೈತರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಾರಿಯಲ್ಲಿರುವ ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆಯ ಕುರಿತು ಮಾಹಿತಿ ನೀಡಿದರು. 

ಕರ್ನಾಟಕ ರಾಜ್ಯದಾದ್ಯಂತ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಮುಖ್ಯ ಮಾರುಕಟ್ಟೆ ಪ್ರಾಂಗಣ, ಉಪಮಾರುಕಟ್ಟೆ ಪ್ರಾಂಗಣ ಮತ್ತು ಮಾರುಕಟ್ಟೆ ಉಪಪ್ರಾಂಗಣಗಳಲ್ಲಿ ಕೃಷಿ ಉತ್ಪನ್ನಗಳ ಮಾರಾಟ ಚಟುವಟಿಕೆಗಳಲ್ಲಿ ತೊಡಗಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಸಾವು ಅಥವಾ ಅಂಗವೈಕಲ್ಯ ಉಂಟಾದಲ್ಲಿ, ಅಂತಹ ರೈತರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ವಿವರಿಸಿದರು.

   ಇದೇ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ರೈತರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳು, ಮಾರುಕಟ್ಟೆ ವ್ಯವಸ್ಥೆ ಹಾಗೂ ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆಯ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

  ಕಾರ್ಯಕ್ರಮದಲ್ಲಿ ಕೃಷಿ ಮಾರುಕಟ್ಟೆ ವ್ಯವಸ್ಥಾಪಕರಾದ ಎಸ್. ಮಂಜುನಾಥ್, ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ, ಕೃಷಿ ಮೇಲ್ವಿಚಾರಕರಾದ ವಸಂತ್, ಸೇವಾಪ್ರತಿನಿಧಿ ಪುಷ್ಪ, ವಿಎಲ್‌ಇ ಕಾವ್ಯ, ಪ್ರಗತಿಪರ ರೈತರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
  ಕಾರ್ಯಕ್ರಮವು ರೈತರಿಗೆ ಕೃಷಿ ಮಾರುಕಟ್ಟೆಯ ಆಧುನಿಕ ವ್ಯವಸ್ಥೆಗಳು ಮತ್ತು ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಅರಿವು ಮೂಡಿಸುವಲ್ಲಿ ಸಹಕಾರಿಯಾಯಿತು.