ಪಿರಿಯಾಪಟ್ಟಣದ ಗೇಟ್ ಬಳಿ ಭೀಕರ ಅಪಘಾತ: ಬಸ್-ಲಾರಿ ಮುಖಾಮುಖಿ ಡಿಕ್ಕಿ, 4 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
admincoorgdaily

ಪಿರಿಯಾಪಟ್ಟಣ:
ಪಿರಿಯಾಪಟ್ಟಣ ತಾಲೂಕಿನ ಕಿರನಳ್ಳಿ ಗೇಟ್ ಬಳಿ ಇಂದು ಬೆಳಗಿನ ಜಾವ 3:30ರ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಮತ್ತು ಪಿರಿಯಾಪಟ್ಟಣದಿಂದ ಮೈಸೂರು ಕಡೆಗೆ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳನ್ನು ಸ್ಥಳೀಯರು ಮತ್ತು ಪೊಲೀಸರು ತಕ್ಷಣ ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.