Kodagu

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ : ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

admincoorgdaily

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ : ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ
ಮಡಿಕೇರಿ : ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಲಭ್ಯವಿರುವ ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಮಡಿಕೇರಿಯ ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸುವಂತೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ.
ಇಂದು ಜಿಲ್ಲಾಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಎಸ್‌ಡಿಟಿಯು ನ ಜಿಲ್ಲಾ ಕಾರ್ಯದರ್ಶಿ ಪ್ರಧಾನ ಎಂ.ಎ.ಅಬ್ದುಲ್ ರಜಾ಼ಕ್ ಅವರು ಇತ್ತೀಚಿನ ದಿನಗಳಲ್ಲಿ ಬಿಪಿಎಲ್ ಕಾರ್ಡ್ ಇದ್ದರೂ ರೋಗಿಗಳಿಂದ ಶುಲ್ಕ ಪಡೆಯಲಾಗುತ್ತಿದೆ ಎನ್ನುವ ಆರೋಪಗಳಿವೆ ಎಂದು ಗಮನ ಸೆಳೆದರು.

ಬಿಪಿಎಲ್ ಕಾರ್ಡ್ ಹೊಂದಿರುವ ಬಡ ಕಾರ್ಮಿಕರೊಬ್ಬರು ಎಕ್ಸ್ -ರೇ ತೆಗೆಯಲು ಮತ್ತು ಬ್ಯಾಂಡೇಜ್ ಹಾಕಿಸಿಕೊಳ್ಳಲು ಒಟ್ಟು 550 ರೂ.ಗಳನ್ನು ಜಿಲ್ಲಾಸ್ಪತ್ರೆಗೆ ಪಾವತಿಸಿದ್ದಾರೆ. ಈ ಶುಲ್ಕವನ್ನು ಯಾವ ನಿಯಮದಡಿ ವಸೂಲಿ ಮಾಡಲಾಗಿದೆ ಎನ್ನುವ ಬಗ್ಗೆ ಸ್ಪಷ್ಟತೆ ಬೇಕು. ಬಿಪಿಎಲ್ ಕಾರ್ಡ್ ಇದ್ದರೆ ಉಚಿತ ಆರೋಗ್ಯ ಸೌಲಭ್ಯ ದೊರೆಯುತ್ತದೆ ಎನ್ನುವ ನಿರೀಕ್ಷೆಯೊಂದಿಗೆ ಬಡ ರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಆದರೆ ಶುಲ್ಕ ಪಾವತಿಸಲೇಬೇಕು ಎನ್ನುವ ಅನಿವಾರ್ಯತೆ ಎದುರಾದಾಗ ಬಡವರು ಜೀವ ಉಳಿಸಿಕೊಳ್ಳಲು ಸಾಲ ಮಾಡಿ ಪಾವತಿಸಬೇಕಾದ ಪರಿಸ್ಥಿತಿ ಎದುರಾಗುತ್ತಿದೆ ಎಂದು ತಿಳಿಸಿದರು.

ಆದ್ದರಿಂದ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಸ್ಪಷ್ಟ ಮಾಹಿತಿ ನೀಡಬೇಕು. ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಮಾಹಿತಿ ಫಲಕ ಅಳವಡಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭ ಎಸ್‌ಡಿಟಿಯು ನ ಜಿಲ್ಲಾ ಸಮಿತಿಯ ಸದಸ್ಯರಾದ ಹಸೀನ ಹಾಗೂ ಮೊಹಿದ್ದೀನ್ ಹಾಜರಿದ್ದರು.