Kodagu

ಗೌರಿ-ಗಣೇಶ ಹಬ್ಬ ಆಚರಣೆ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಮನವಿ

admincoorgdaily

ಗೌರಿ-ಗಣೇಶ ಹಬ್ಬ ಆಚರಣೆ   ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಮನವಿ
ಮಡಿಕೇರಿ:-ಗೌರಿ ಗಣೇಶ ಹಬ್ಬ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಕೋರಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ಮುಂದಿನ ಸೋಮವಾರದಿಂದ ಗೌರಿ-ಗಣೇಶ ಹಬ್ಬ ಆರಂಭವಾಗಲಿದ್ದು, ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಹ ನಡೆಯಲಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನ್ಯಾಯಾಲಯದ ಆದೇಶಗಳನ್ನು ಪಾಲಿಸಬೇಕು ಎಂದು ಕೋರಿದರು.

ಈಗಾಗಲೇ ತಾಲ್ಲೂಕು ದಂಡಾಧಿಕಾರಿ ಅವರ ನೇತೃತ್ವದಲ್ಲಿ ಏಕಗವಾಕ್ಷಿ ಸಮಿತಿಯನ್ನು ರಚಿಸಲಾಗಿದ್ದು, ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಮಾಡುವವರು ಏಕಗವಾಕ್ಷಿ ಸಮಿತಿಯ ನಿಯಮಗಳನ್ನು ಅನುಸರಿಸಬೇಕು ಎಂದು ಕೋರಿದರು.

ಅಗತ್ಯವಿರುವ ಕಡೆ ಬ್ಯಾರಿಕೇಡ್‍ಗಳ ನಿರ್ಮಾಣ, ಸಿಸಿಟಿವಿ ಅಳವಡಿಕೆ, ಪ್ರಸಾದ ವಿತರಣೆ ಸಂದರ್ಭದಲ್ಲಿ ಅಗತ್ಯ ಮಾರ್ಗಸೂಚಿ ಪಾಲಿಸುವುದು. ಪರಿಸರ ಸ್ನೇಹಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪಿಸುವುದು, ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಆಂಬ್ಯುಲೆನ್ಸ್ ಸೇವೆಗಳು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವುದು ಮತ್ತಿತರ ಬಗ್ಗೆ ಜಾಗೃತವಹಿಸುವಂತೆ ಸಲಹೆ ಮಾಡಿದರು.
ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಶಾಂತಿಯುತವಾಗಿ ಶ್ರದ್ಧಾ ಭಕ್ತಿಯಿಂದ ಹಬ್ಬವನ್ನು ಆಚರಿಸಬೇಕು. ಭಕ್ತಿ ಇರಲಿ ಆದರೆ ಡಿಜೆ ಬೇಡ ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಮಾತನಾಡಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಮಿತಿಯವರು ಅಗತ್ಯ ಮುನ್ನೆಚ್ಚರ ವಹಿಸಬೇಕು. ಬೆಲೆ ಬಾಳುವ ವಸ್ತುಗಳನ್ನು ಇಡಬಾರದು. ರಾತ್ರಿ ವೇಳೆಯಲ್ಲಿ ಹೆಚ್ಚಿನ ಎಚ್ಚರವಹಿಸಬೇಕು ಎಂದು ಸಲಹೆ ಮಾಡಿದರು. 
ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಜಾಗದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ತಹಶೀಲ್ದಾರ್ ನೇತೃತ್ವದ ಏಕಗವಾಕ್ಷಿ ಸಮಿತಿಯ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಪ್ಲೆಕ್ಸ್, ಬ್ಯಾನರ್, ಬಂಟಿಗ್ಸ್ ಅಳವಡಿಸಬೇಕಿದ್ದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಧ್ವನಿ ವರ್ದಕವನ್ನು ನ್ಯಾಯಾಲಯದ ಆದೇಶದಂತೆ ಪಾಲಿಸಬೇಕು. ಮೆರವಣಿಗೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಮುಂದಾಗಬೇಕು. ಆ ಸಂದರ್ಭದಲ್ಲಿ ಸಿಸಿಟಿವಿ ಅಳವಡಿಸುವುದರ ಜೊತೆಗೆ ಮತ್ತೊಬ್ಬರಿಗೆ ಕಿರಿಕಿರಿ ಉಂಟಾಗದಂತೆ ಎಚ್ಚರವಹಿಸಬೇಕು ಎಂದರು.
ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಅವರು ಮಾತನಾಡಿ ಸಾರ್ವಜನಿಕರು ಪರಿಸರಸ್ನೇಹಿ ಗೌರಿಗಣೇಶ ಹಬ್ಬವನ್ನು ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲ ಸಂರಕ್ಷಿಸಲು ಸಹಕರಿಸಬೇಕಾಗಿ ಕೋರಿದರು.

ಮಾನ್ಯ ಉಚ್ಛ ನ್ಯಾಯಾಲಯದ ಆದೇಶದ ಪ್ರಕಾರ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು ಅತ್ಯಗತ್ಯ ಎಂದರು.

ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಹಾಗೂ ಒಣಕಸವನ್ನು ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು ಎಂದು ಕೋರಿದರು. 

ಗಣೇಶೋತ್ಸವದ ಸಂದರ್ಭದಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದನ್ನು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿμÉೀಧಿಸಲಾಗಿದೆ. ಗಣೇಶ ವಿಗ್ರಹಗಳ ವಿಸರ್ಜನೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಇತರೆ ಯಾವುದೇ ಪಟಾಕಿ ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಅವರು ಹೇಳಿದರು.

ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್ ಅವರು ಮಾತನಾಡಿ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ವಿದ್ಯುತ್ ಅವಘಡಗಳು ಉಂಟಾಗದಂತೆ ಎಚ್ಚರವಹಿಸಬೇಕು ಎಂದು ಕೋರಿದರು. 
ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಟಿ.ಸತೀಶ್, ತಹಶೀಲ್ದಾರ್‍ಗಳಾದ ಪ್ರವೀಣ್ ಕುಮಾರ್, ಶ್ರೀಧರ, ಸಂಜನಾ, ಡಿವೈಎಸ್‍ಪಿಗಳಾದ ಸೂರಜ್, ಮೇದಪ್ಪ, ಚಂದ್ರಶೇಖರ್, ಪುರಸಭೆ ಮುಖ್ಯಾಧಿಕಾರಿಗಳಾದ ಗಿರೀಶ್, ನಾಚಪ್ಪ, ಇತರರು ಇದ್ದರು.