ಕುಟ್ಟ ಹೋಂಸ್ಟೇ ಮಾಲೀಕನಿಗೆ 5 ಲಕ್ಷ ಪರಿಹಾರ ನೀಡದ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
admincoorgdaily

ಬೆಂಗಳೂರು, ಸೆ.16: ಅಮೆರಿಕದ ಪ್ರವಾಸಿ ಮಹಿಳೆಯೊಬ್ಬರ ಮೇಲೆ ಕೊಡಗಿನ ಕುಟ್ಟ ವ್ಯಾಪ್ತಿಯ ಹೋಂ ಸ್ಟೇ ಒಂದರಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಹೋಂ ಸ್ಟೇ ಮಾಲೀಕರನ್ನು ಕಾನೂನು ಬಾಹಿರವಾಗಿ ಬಂಧಿಸಿದ ಕಾರಣಕ್ಕೆ ಅವರಿಗೆ ರೂ. 5 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ಪಾಲನೆ ಮಾಡಿಲ್ಲ ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಹೈಕೋರ್ಟ್ ನಿರ್ದೇಶನದಂತೆ ಒಂದು ತಿಂಗಳಲ್ಲಿ ರಾಜ್ಯ ಸರ್ಕಾರ ತನಗೆ ರೂ. 5 ಲಕ್ಷ ಪರಿಹಾರ ಪಾವತಿ ಮಾಡಿಲ್ಲ ಎಂದು ಆರೋಪಿಸಿ ಹೋಂ ಸ್ಟೇ ಮಾಲೀಕ ಪೊನ್ನಪ್ಪ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.
ಹಿಂದಿನ ಆದೇಶ: 'ಪ್ರಕರಣ ನಡೆದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿಲ್ಲ' ಎಂಬ ಆರೋಪದಡಿ ತನ್ನ ವಿರುದ್ಧ ಮೊಕದ್ದಮೆ ದಾಖಲು ಮಾಡಲಾಗಿದೆ. ಇದರಿಂದ ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಇದಕ್ಕಾಗಿ ರೂ. 15 ಲಕ್ಷ ಪರಿಹಾರ ನೀಡಲು ನಿರ್ದೇಶಿಸಬೇಕು ಮತ್ತು ಎಫ್‍ಐಆರ್ ರದ್ದುಪಡಿಸಬೇಕು ಎಂದು ಕೋರಿ ಪೊನ್ನಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಯನ್ನು ಭಾಗಶಃ ಪುರಸ್ಕರಿಸಿತ್ತು. ಹೋಂ ಸ್ಟೇ ಮಾಲೀಕರ ಮೂಲಭೂತ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂಬ ಅಭಿಪ್ರಾಯದೊಂದಿಗೆ ಅವರಿಗೆ ರಾಜ್ಯ ಸರ್ಕಾರ ಒಂದು ತಿಂಗಳಲ್ಲಿ ರೂ. 5 ಲಕ್ಷ ಪರಿಹಾರ ಪಾವತಿ ಮಾಡಬೇಕು ಎಂದು ಆದೇಶಿಸಿತ್ತು.