Kodagu

ಪೊನ್ನಂಪೇಟೆ ಪ್ರಜಾಸೌಧ ಕಾಮಗಾರಿ ಪರಿಶೀಲನೆ; ಶೀಘ್ರ ಪೂರ್ಣಗೊಳಿಸಲು ಶಾಸಕ‌ ಎಎಸ್ ಪೊನ್ನಣ್ಣ ಸೂಚನೆ

admincoorgdaily

ಪೊನ್ನಂಪೇಟೆ ಪ್ರಜಾಸೌಧ ಕಾಮಗಾರಿ ಪರಿಶೀಲನೆ; ಶೀಘ್ರ ಪೂರ್ಣಗೊಳಿಸಲು ಶಾಸಕ‌ ಎಎಸ್ ಪೊನ್ನಣ್ಣ ಸೂಚನೆ
ಪೊನ್ನಂಪೇಟೆ, ನ. 15: a ಪೊನ್ನಂಪೇಟೆ ತಾಲೂಕಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಪ್ರಜಾಸೌಧ ನಿರ್ಮಾಣ ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಶಾಸಕರಾಗಿ ಆಯ್ಕೆಯಾದ ಬಳಿಕ ನೂತನ ತಾಲೂಕಿಗೆ ಸುಸಜ್ಜಿತ ಪ್ರಜಾಸೌಧ ನಿರ್ಮಿಸುವುದನ್ನು ಪ್ರಮುಖ ಆದ್ಯತೆಯಾಗಿ ಪರಿಗಣಿಸಿದ್ದ  ಅವರು, ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲಾ ಸರ್ಕಾರಿ ಇಲಾಖೆಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸುವ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಂಡಿದ್ದರು. ಈ ಹಿಂದೆ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆಯನ್ನೂ ನೆರವೇರಿಸಿದ್ದರು.

ಪ್ರಸ್ತುತ ಪ್ರಗತಿಯಲ್ಲಿರುವ ಕಾಮಗಾರಿಯನ್ನು ಭಾನುವಾರ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು .ಕಟ್ಟಡದ ವಿನ್ಯಾಸ ಹಾಗೂ ಕಾಮಗಾರಿಯ ಗುಣಮಟ್ಟವನ್ನು ವೀಕ್ಷಿಸಿ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಕಾಮಗಾರಿಗೆ ಇನ್ನಷ್ಟು ವೇಗ ನೀಡಿ ಶೀಘ್ರ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜುನೈದ್, ಪಕ್ಷದ ಮುಖಂಡರಾದ ಕೊಲ್ಲಿರ ಬೋಪಣ್ಣ, ಅಜ್ಜಿಕುಟ್ಟಿರ ಪೊನ್ನಪ್ಪ, ಪೂವಯ್ಯ, ಸಜಾನ್, ಹ್ಯಾರೀಶ್, ಕುಂಡಚ್ಚಿರ ಮಂಜು ದೇವಯ್ಯ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.