ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸೆ.13 ರೊಳಗೆ ಅನುಮತಿ ಪಡೆಯಿರಿ: ಜಿಲ್ಲಾಧಿಕಾರಿ ಸೋಮಶೇಖರ್
admincoorgdaily

ಮಡಿಕೇರಿ ಸೆ.07:-ಮುಂದಿನ ದಿನಗಳಲ್ಲಿ ವಿವಿಧ ಧಾರ್ಮಿಕ ಹಬ್ಬಗಳು ಮತ್ತು ಆಚರಣೆಗಳು ಬರಲಿದ್ದು, ಈ ಸಂದರ್ಭದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಗೌರಿ ಗಣೇಶ ಹಬ್ಬ ಸಂಬಂಧ ಜಿಲ್ಲೆಯ ಹಲವು ಕಡೆಗಳಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತಿದ್ದು, ವಿಸರ್ಜನೆ ಸಂದರ್ಭದಲ್ಲಿ ಸರ್ಕಾರದ ನಿಯಮ ಪಾಲಿಸುವಲ್ಲಿ ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯವರು ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಲಹೆ ಮಾಡಿದ್ದಾರೆ.
ಈಗಾಗಲೇ ಏಕಗವಾಕ್ಷಿ ಸಮಿತಿ ರಚಿಸಲಾಗಿದ್ದು, ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂಬಂಧ ಸೆಪ್ಟೆಂಬರ್ 13 ರೊಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಏಕಗವಾಕ್ಷಿ ಸಮಿತಿಯಲ್ಲಿ ಆಯಾಯ ತಾಲ್ಲೂಕಿನ ತಹಶೀಲ್ದಾರರು ಅಧ್ಯಕ್ಷರಾಗಿ, ಪರಿಸರ ಅಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ತಾಲ್ಲೂಕಿನ ಪೊಲೀಸ್ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಸೆಸ್ಕ್ ಇಲಾಖೆಯ ಎಇಇಗಳು, ತಾ.ಪಂ.ಇಒ ಗಳು ಮತ್ತು ಸ್ಥಳೀಯ ಸಂಸ್ಥೆಗಳ ಪೌರಾಯುಕ್ತಪ್ರತಿಷ ಮುಖ್ಯಾಧಿಕಾರಿಗಳು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಡಿಜೆಯನ್ನು ಹೆಚ್ಚು ಬಳಸುತ್ತಿದ್ದು, ಈ ಸಂದರ್ಭದಲ್ಲಿ ಮಕ್ಕಳು, ಹಿರಿಯ ನಾಗರಿಕರು ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ನಿಯಮಗಳ ಬಗ್ಗೆ ಮನವರಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಧಾರ್ಮಿಕ ಹಬ್ಬ ಹಾಗೂ ಆಚರಣೆಗಳನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು. ಗೌರಿ-ಗಣೇಶ ಮೂರ್ತಿಗಳನ್ನು ಪರಿಸರ ಸ್ನೇಹಿಯಾಗಿ ಪ್ರತಿಷ್ಠಾಪಿಸಿ ಪೂಜಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಕೋರಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಮಾತನಾಡಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂಬಂಧ ಏಕಗವಾಕ್ಷಿ ಸಮಿತಿಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದರು.
ಗೌರಿ ಗಣೇಶ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಮೆರವಣಿಗೆ ಸಾಗುವ ಪ್ರದೇಶದಲ್ಲಿ ಹೆಚ್ಚಿನ ಬೆಳಕು ವ್ಯವಸ್ಥೆ ಇರಬೇಕು. ವಿಸರ್ಜನೆ ಸಂದರ್ಭದಲ್ಲಿ ಜೀವರಕ್ಷಕ ಜಾಕೆಟ್ ಬಳಸಬೇಕು. ಹೀಗೆ ಏಕಗವಾಕ್ಷಿ ಸಮಿತಿಯು ಈ ಎಲ್ಲಾ ಬಗ್ಗೆ ಗಮನಿಸಿ ಮೇಲುಸ್ತುವಾರಿ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ನಿರ್ದೇಶನ ನೀಡಿದರು.
ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಬೃಹತ್ ವಾಹನದಲ್ಲಿ ಮೆರವಣಿಗೆ ಕೈಗೊಳ್ಳಲಿದ್ದು, ಈ ಸಂಬಂಧ ವಾಹನಗಳ ಅನುಮತಿ ಬಗ್ಗೆ ಸಂಬಂಧಿಸಿದವರ ಜೊತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರು ಸಭೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಲಹೆ ಮಾಡಿದರು.
ಜಿಲ್ಲಾ ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಅವರು ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯು ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ವಿಗ್ರಹಗಳನ್ನು ಬಳಸದೆ, ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿದರು.
ಬಣ್ಣದ ಮೂರ್ತಿಗಳನ್ನು ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಮೂಲ ಕಲುಷಿತಗೊಂಡು ಅವುಗಳ ಭೌತಿಕ ಹಾಗೂ ರಾಸಾಯನಿಕ ಸ್ಥಿತಿಗಳ ಬದಲಾವಣೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ, ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಹಾನಿ ಉಂಟಾಗುತ್ತದೆ. ಆದ್ದರಿಂದ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತಾಗಬೇಕು ಎಂದರು.
ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಕೆರೆ, ಬಾವಿ, ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ಅವರು ತಿಳಿಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳಾದ ಸೂರಜ್ ಮತ್ತು ಮೇದಪ್ಪ ಅವರು ಮಾತನಾಡಿ ಪೊಲೀಸ್ ಇಲಾಖೆಯಿಂದ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆದರೆ ಪಾಲಿಸುತ್ತಿಲ್ಲ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಟಿ.ಸತೀಶ್, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಶ್ರೀಧರ, ಕೃಷ್ಣಮೂರ್ತಿ, ಸಂಜನಾ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಕೃಷ್ಣ ಪ್ರಸಾದ್, ನಾಚಪ್ಪ, ಗೋಪಿ, ಗಿರೀಶ್, ತಾ.ಪಂ.ಇಒಗಳಾದ ಶೇಖರ್, ಅಪ್ಪಣ್ಣ, ರಾಜೇಶ್, ಇತರರು ಇದ್ದರು.
ಮತ್ತಷ್ಟು ಮಾಹಿತಿ: ಸಾರ್ವಜನಿಕರು ಪರಿಸರಸ್ನೇಹಿ ಗೌರಿಗಣೇಶ ಹಬ್ಬವನ್ನು ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲ ಸಂರಕ್ಷಿಸಲು ಸಹಕರಿಸಬೇಕಾಗಿ ಕೋರಿದೆ.
ಮಾನ್ಯ ಉಚ್ಛ ನ್ಯಾಯಾಲಯದ ಆದೇಶದ ಪ್ರಕಾರ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು.
ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಹಾಗೂ ಒಣಕಸವನ್ನು ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು.
ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು, ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು.
ಗಣೇಶೋತ್ಸವದ ಸಂದರ್ಭದಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದನ್ನು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸಲಾಗಿದೆ. ಗಣೇಶ ವಿಗ್ರಹಗಳ ವಿಸರ್ಜನೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಇತರೆ ಯಾವುದೇ ಪಟಾಕಿ ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಅವರು ಕೋರಿದ್ದಾರೆ.