ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯುವ ಸಂಸತ್ ಅಭಿಯಾನಕ್ಕೆ ಜಿಲ್ಲಾಧಿಕಾರಿ ಸೋಮಶೇಖರ್ ಚಾಲನೆ
admincoorgdaily

ಮಡಿಕೇರಿ ಸೆ.15:-ಇಡೀ ವಿಶ್ವದಲ್ಲಿ ಭಾರತವು ಬೃಹತ್ ಸಂವಿಧಾನ ಹೊಂದಿದ್ದು, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಭಾರತ ಸಂವಿಧಾನವು ಮೂಲತಃ 395 ವಿಧಿಗಳನ್ನು ಹೊಂದಿದ್ದು, ಪ್ರಸ್ತುತ 25 ಭಾಗಗಳಲ್ಲಿ ಸುಮಾರು 448 ಕ್ಕೂ ಹೆಚ್ಚು ವಿಧಿಗಳು ಹಾಗೂ 12 ಅನುಸೂಚಿಗಳನ್ನು ಒಳಗೊಂಡು ಬೃಹತ್ ಸಂವಿಧಾನ ಹೊಂದಿದೆ ಎಂದು ಮಾಹಿತಿ ನೀಡಿದರು.
ಪ್ರಜಾಪ್ರಭುತ್ವ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸರ್ಕಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಯುವ ಸಂಸತ್‍ಗೆ ಇಂದಿನಿಂದ ಚಾಲನೆ ನೀಡಿದ್ದು, ಈ ಯುವ ಸಂಸತ್‍ನಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಕೊಡಗು ಜಿಲ್ಲೆಗೆ ಒಳ್ಳೆಯ ಹೆಸರು ತರಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೆ.ಸಿ.ದಯಾನಂದ ಅವರು ಪ್ರಜಾಪ್ರಭುತ್ವ ಒಂದು ಕೇವಲ ಆಡಳಿತ ವ್ಯವಸ್ಥೆಯಲ್ಲ. ಅದು ಜೀವನದ ಮೌಲ್ಯ ಆಗಿದೆ ಎಂದರು.
ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ, ನ್ಯಾಯ ಸಹಿಷ್ಣುತೆ, ಮಾನವ ಹಕ್ಕುಗಳು, ಹೊಣೆಗಾರಿಕೆ, ಪರಸ್ಪರ ನಂಬಿಕೆ ಮತ್ತು ಗೌರವ ಮೊದಲಾದ ಮೂಲ ಅಂಶಗಳ ಮೇಲೆ ನಿಂತಿದೆ ಎಂದು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಜನರ ಧ್ವನಿಗೆ ಬೆಲೆ ಇರುವಲ್ಲಿ ಪ್ರಜಾಪ್ರಭುತ್ವ ಇದೆ ಎಂದು ಸಾರಿದ್ದಾರೆ. ಪ್ರತಿಯೊಬ್ಬ ಮನುಷ್ಯನ ಘನತೆಗೆ ಗೌರವ ಇರುವಲ್ಲಿ ನಿಜವಾದ ಸ್ವಾತಂತ್ರ್ಯ ಇದೆ ಎಂದು ತಿಳಿಸಿದ್ದಾರೆ ಎಂದರು.
ಮಹಾತ್ಮ ಗಾಂಧೀಜಿಯವರು ಸಹ ಪ್ರಜಾಪ್ರಭುತ್ವವು ದುರ್ಬಲರನ್ನು ಬಲಿಷ್ಠರಿಂದ ರಕ್ಷಿಸುವ ವ್ಯವಸ್ಥೆ ಆಗಿರಬೇಕು. ನಿಜವಾದ ಪ್ರಜಾಪ್ರಭುತ್ವ ಎಂದರೆ ಕೇವಲ ಬಹುಮತದ ಆಳ್ವಿಕೆಯಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ಸಮಾನ ಅವಕಾಶ ಮತ್ತು ಗೌರವ ದೊರೆಯುವುದೇ ಸ್ವಾತಂತ್ರ್ಯದ ನಿಜವಾದ ಪ್ರಜಾಪ್ರಭುತ್ವ ಎಂದು ಹೇಳಿದ್ದಾರೆ ಎಂದು ಕೆ.ಸಿ.ದಯಾನಂದ ಅವರು ವಿವರಿಸಿದರು.
ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು, ಜನರು ಆಡಳಿತ ಮೂಲವಾಗಿದ್ದು, ಪ್ರಜೆಗಳು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಆಯ್ಕೆಯಾದ ಜನಪ್ರತಿನಿಧಿಗಳು ಜನರ ಆಶಯದಂತೆ ಆಡಳಿತ ನಡೆಸಬೇಕು ಎಂದು ಕೆ.ಸಿ.ದಯಾನಂದ ಅವರು ಅಭಿಪ್ರಾಯಪಟ್ಟರು.
ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆಯಲ್ಲ. ಅದೊಂದು ಪ್ರಮುಖ ಭಾಗವಾಗಿದ್ದು, ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಪ್ರತಿಯೊಬ್ಬರೂ ಕಾನೂನಿನ ಮುಂದೆ ಸಮಾನರು ಎಂಬುದಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ಯಶಸ್ಸು ಕೇವಲ ನಾಯಕರಿಂದಲ್ಲ. ಬದಲಾಗಿ ಜವಾಬ್ದಾರಿಯುತ ನಾಗರಿಕರಿಂದ ಮಾತ್ರ ಸಾಧ್ಯ. ಆ ದಿಸೆಯಲ್ಲಿ ಪ್ರಜಾಪ್ರಭುತ್ವದಲ್ಲಿ ಮತದಾನ ಅತ್ಯಂತ ಪ್ರಮುಖವಾದ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದು ಪಾಧ್ಯಾಪಕರಾದ ಕೆ.ಸಿದಯಾನಂದ ಅವರು ವರ್ಣಿಸಿದರು.
ಯಾವುದೇ ಆಮಿಷ, ಒತ್ತಡ ಅಥವಾ ವೈಯಕ್ತಿಕ ಲಾಭಕ್ಕೆ ಬಳಸದೆ ಮತಹಕ್ಕು ಚಲಾಯಿಸಬೇಕು. ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮತವನ್ನು ಮಾರಿಕೊಳ್ಳಬಾರದು ಎಂದು ಒತ್ತಿ ಹೇಳಿದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದ್ದು, ಭಿನ್ನಾಭಿಪ್ರಾಯಕ್ಕೆ ಅವಕಾಶವಿದೆ ಎಂದರು.
‘ಪ್ರಜಾಪ್ರಭುತ್ವ ಉಳಿದರೆ ಸ್ವಾತಂತ್ರ್ಯ ಉಳಿಯುತ್ತದೆ. ಸ್ವಾತಂತ್ರ್ಯ ಉಳಿದರೆ ಸಮಾನತೆ ಉಳಿಯುತ್ತದೆ. ಸಮಾನತೆ ಉಳಿದರೆ ನ್ಯಾಯ ಉಳಿಯುತ್ತದೆ. ನ್ಯಾಯ ಉಳಿದರೆ ರಾಷ್ಟ್ರದ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ಕೆ.ಸಿ.ದಯಾನಂದ ಅವರು ಅಭಿಪ್ರಾಯಪಟ್ಟರು.
ಪ್ರಜಾಪ್ರಭುತ್ವದ ಯಶಸ್ಸು ಕೇವಲ ಚುನಾವಣೆ ನಡೆಸುವುದರಿಂದ ಯಶಸ್ವಿಯಾಗುವುದಿಲ್ಲ. ಜಾಗೃತ ಪ್ರಜೆಗಳು ಉತ್ತಮ ಆಡಳಿತ, ಕಾನೂನಿನ ಆಳ್ವಿಕೆ ಮತ್ತು ಸಂವಿಧಾನದ ಮೌಲ್ಯಗಳ ಪಾಲನೆ ಇದ್ದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದರು.
ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ ಪ್ರಜಾಪ್ರಭುತ್ವದ ತತ್ವಗಳು, ಮೌಲ್ಯಗಳನ್ನು ಸಂರಕ್ಷಿಸುವುದು ಮತ್ತು ಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ವಿಶ್ವಸಂಸ್ಥೆಯ ಸಾಮಾನ್ಯ ಸಭೆ 2007 ರಲ್ಲಿ ಸೆಪ್ಟೆಂಬರ್, 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಗಣಪತಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹೇಶ್, ಪ್ರಮುಖರಾದ ಎಚ್.ಎಲ್.ದಿವಾಕರ, ಗಾಯತ್ರಿ, ಎಚ್.ಎಲ್.ಕುಮಾರ, ಪ್ರೇಮ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಇತರರು ಇದ್ದರು.
ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಈ.ರಾಜು ಮತ್ತು ತಂಡದವರು ಸಂವಿಧಾನ ಕುರಿತು ಹಾಡು ಹಾಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಸಂವಿಧಾನ ಪೀಠಿಕೆ ಓದಿದರು. ಲಹರಿ ತಂಡದವರು ವಂದೇ ಮಾತರಂ, ನಾಡಗೀತೆ, ರೈತಗೀತೆ ಹಾಡಿದರು. ಪವನ್ ಕುಮಾರ್ ನಿರೂಪಿಸಿ, ವಂದಿಸಿದರು.