ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
admincoorgdaily

ಮಡಿಕೇರಿ ಸೆ.11:-ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯು ಸೆಪ್ಟೆಂಬರ್, 15 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು 2007 ರ ಘೋಷಣೆಯಂತೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಪ್ರತೀ ವರ್ಷ ಸೆಪ್ಟೆಂಬರ್, 15 ರಂದು ಆಚರಿಸಲಾಗುತ್ತಿದೆ. ಆದ್ದರಿಂದ ಈ ಬಾರಿಯು ಸಹ ಕಾರ್ಯಕ್ರಮ ಆಯೋಜನೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.
ಸಮಾಜ ಕಲ್ಯಾಣ, ಶಾಲಾ ಶಿಕ್ಷಣ, ಕಾನೂನು ನ್ಯಾಯ, ಮಾನವ ಹಕ್ಕುಗಳು ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಜಿಲ್ಲೆಯ ತಾಲ್ಲೂಕು ಮಟ್ಟದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವಂತೆ ಸಲಹೆ ಮಾಡಿದರು.
ಪ್ರಜಾಪ್ರಭುತ್ವ ವಿಚಾರಧಾರೆಯನ್ನು ಸಾರ್ವಜನಿಕರಿಗೆ ಹಾಗೂ ಯುವಕರಿಗೆ ತಿಳಿಸಬೇಕಾದ ಅಗತ್ಯತೆ ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಕಾರ್ಯಕ್ರಮವನ್ನು ಏರ್ಪಡಿಸುವಂತೆ ಸಲಹೆ ಮಾಡಿದರು.
ಸೆಪ್ಟೆಂಬರ್, 16 ರಿಂದ ನವೆಂಬರ್, 26 ರವರೆಗೆ ತಾಲ್ಲೂಕು ಹಾಗೂ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಯುವ ಸಂಸತ್ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಇದೇ ಸೆಪ್ಟೆಂಬರ್, 15 ರಂದು ಯುವ ಸಂಸತ್ ಸಭೆಗೆ ಚಾಲನೆ ನೀಡಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಸರ್ಕಾರದ ನಿರ್ದೇಶನದಂತೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಲು ಅಗತ್ಯ ಕ್ರಮವಹಿಸಲಾಗುವುದು. ಕಾರ್ಯಕ್ರಮದ ಸಂದರ್ಭದಲ್ಲಿ ಯುವ ಸಂಸತ್ ಸಭೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.