ಪೊನ್ನಂಪೇಟೆಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
admincoorgdaily

ಪೊನ್ನಂಪೇಟೆ, ಸೆ.15: ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಂಗಳವಾರ ಪೊನ್ನಂಪೇಟೆಯ ತಾಲ್ಲೂಕು ಪಂಚಾಯತ್‌ನ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ನಂತರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ,
ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ, ಡಾ. ಬಿ.ಆರ್. ಅಂಬೇಡ್ಕರ್ ಅವರು ನಾನಾ ದೇಶಗಳ ಸಂವಿಧಾನಗಳನ್ನು ಸುದೀರ್ಘವಾಗಿ ಅಧ್ಯಯನ ಮಾಡಿ, ಭಾರತದಂತಹ ಬಹುಜಾತಿ, ಬಹುಭಾಷೆ ಮತ್ತು ಬಹುಧರ್ಮಗಳ ವೈವಿಧ್ಯಮಯ ದೇಶಕ್ಕೆ ಸೂಕ್ತವಾದ ಅತ್ಯುತ್ತಮ ಸಂವಿಧಾನವನ್ನು ನೀಡಿದ್ದಾರೆ. ಸಂವಿಧಾನದ ಶಿಲ್ಪಿಯಾಗಿ ಅವರ ಕೊಡುಗೆ ಸ್ಮರಣೀಯ ಎಂದರು.
ಇಂದಿನ ರಾಜಕೀಯ ಹಾಗೂ ಚುನಾವಣಾ ವ್ಯವಸ್ಥೆಯಲ್ಲಿ ಮೌಲ್ಯಗಳ ಕುಸಿತ ಕಂಡುಬರುತ್ತಿದ್ದು, ಜನಸೇವೆಗಿಂತ ಹಣಬಲದ ಪ್ರಭಾವ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷದಷ್ಟೇ ವಿರೋಧ ಪಕ್ಷಗಳ ಪಾತ್ರವೂ ಅತ್ಯಂತ ಪ್ರಮುಖವಾಗಿದ್ದು, ಸರ್ಕಾರದ ನ್ಯೂನತೆಗಳನ್ನು ತಿದ್ದಿ ಸರಿದಾರಿಗೆ ತರುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದು ಹೇಳಿದರು.
ಸಿಂಗಾಪುರದ ಮಾದರಿಯನ್ನು ಉದಾಹರಿಸಿದ ಅವರು, ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ಶಿಸ್ತು ಹಾಗೂ ಮೌಲ್ಯವರ್ಧಿತ ರಾಜಕಾರಣದ ಅಗತ್ಯವನ್ನು ಪ್ರತಿಪಾದಿಸಿದರು. ದೇಶದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಯನ್ನು ತರಲು ಪ್ರತಿಯೊಬ್ಬರೂ ಶ್ರಮಿಸಬೇಕಾಗಿದೆ ಎಂದು ಕರೆ ನೀಡಿದರು.
ಪೊನ್ನಂಪೇಟೆ ತಹಶೀಲ್ದಾರ್ ಸಂಜನಾ ಸಿ ಎಸ್ ಮಾತನಾಡಿ,
ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ನಾಗರಿಕರ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಯುವ ಸಂಸತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಪ್ರೌಢಶಾಲೆ ಹಾಗೂ ಕಾಲೇಜು ಹಂತದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು, ವಿಧಾನಸೌಧದ ಅಧಿವೇಶನ ಮಾದರಿಯಲ್ಲಿ ಚರ್ಚೆ, ಸಂವಾದ ಹಾಗೂ ಚರ್ಚಾಸ್ಪರ್ಧೆಗಳನ್ನು ನಡೆಸಲಾಗುತ್ತದೆ. ವಿದ್ಯಾರ್ಥಿಗಳು ವಿಷಯಗಳನ್ನು ಅರಿತುಕೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದರೊಂದಿಗೆ, ಇತರರ ಅಭಿಪ್ರಾಯಗಳನ್ನು ಗೌರವಿಸಿ ಆಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಜಾಪ್ರಭುತ್ವವು ಕೇವಲ ಹಕ್ಕುಗಳನ್ನು ನೀಡುವುದಲ್ಲ, ಉತ್ತಮ ನಾಗರಿಕರಾಗುವ ಜವಾಬ್ದಾರಿಯನ್ನೂ ನೀಡುತ್ತದೆ. ವಿದ್ಯಾರ್ಥಿಗಳು ಜಗತ್ತಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಅರಿತುಕೊಂಡು ಪ್ರಶ್ನಿಸುವ ಹಾಗೂ ವಿಚಾರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ನಾಯಕತ್ವ ಮತ್ತು ನಾಗರಿಕ ಪ್ರಜ್ಞೆಯನ್ನು ಬೆಳೆಸುವುದು ಉದ್ದೇಶವಾಗಿದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪೊನ್ನಂಪೇಟೆ ಕೆಪಿಎಸ್ ಶಾಲೆಯ ಶಿಕ್ಷಕ ರಮೇಶ್ ಕೆ ಮಾತನಾಡಿ,ಪ್ರಜಾಪ್ರಭುತ್ವದ ಮೌಲ್ಯ ಅರಿತು ಉತ್ತಮ ನಾಯಕತ್ವ ಬೆಳೆಸಬೇಕು
ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾತನಾಡಿದ ಅವರು, ಪ್ರಜಾಪ್ರಭುತ್ವವೆಂದರೆ ಕೇವಲ ಹಕ್ಕುಗಳ ವ್ಯವಸ್ಥೆಯಲ್ಲ ಅದು ಪ್ರಜೆಗಳ ಜವಾಬ್ದಾರಿ, ಪರಸ್ಪರ ಗೌರವ ಹಾಗೂ ಇತರರ ಅಭಿಪ್ರಾಯಗಳನ್ನು ಆಲಿಸುವ ಮನೋಭಾವವೂ ಆಗಿದೆ ಎಂದು ಹೇಳಿದರು.
2007ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೆಪ್ಟೆಂಬರ್ 15ರಂದು ವಿಶ್ವ ಪ್ರಜಾಪ್ರಭುತ್ವ ದಿನ ಆಚರಿಸಲು ನಿರ್ಧರಿಸಲಾಗಿದ್ದು, 2008ರಿಂದ ಆಚರಣೆ ಆರಂಭವಾಗಿದೆ. ಇದೇ ದಿನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನವೂ ಆಗಿರುವುದು ಕರ್ನಾಟಕದ ಹೆಮ್ಮೆಯ ಸಂಗತಿ ಎಂದರು.
ಅಬ್ರಹಾಂ ಲಿಂಕನ್ ಅವರ ಪ್ರಕಾರ ಪ್ರಜಾಪ್ರಭುತ್ವವೆಂದರೆ ‘ಪ್ರಜೆಗಳಿಂದ, ಪ್ರಜೆಗಳಿಗಾಗಿ ಮತ್ತು ಪ್ರಜೆಗಳಿಗೋಸ್ಕರ ಇರುವ ವ್ಯವಸ್ಥೆ’. ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ಪರೋಕ್ಷ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಮತದಾನದ ಮೂಲಕ ಜನರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ವಿವರಿಸಿದರು.
ಉತ್ತಮ ನಾಯಕರು ರೂಪುಗೊಳ್ಳಲು ಕುಟುಂಬ, ಶಿಕ್ಷಕರು ಹಾಗೂ ಸಮಾಜ ಪ್ರಮುಖ ಪಾತ್ರ ವಹಿಸುತ್ತವೆ. ತಾಯಿ ಮಕ್ಕಳಲ್ಲಿ ಕುಟುಂಬ ಮೌಲ್ಯಗಳನ್ನು ಬೆಳೆಸಬೇಕು, ಶಿಕ್ಷಕರು ನಾಯಕತ್ವ ಗುಣಗಳನ್ನು ಗುರುತಿಸಿ ಮಾರ್ಗದರ್ಶನ ನೀಡಬೇಕು ಹಾಗೂ ಸಮಾಜವು ಶಾಂತಿ, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಮೌಲ್ಯಗಳನ್ನು ಬೆಳೆಸುವ ಮೂಲಕ ಉತ್ತಮ ನಾಯಕತ್ವಕ್ಕೆ ದಾರಿ ಮಾಡಿಕೊಡಬೇಕು ಎಂದು ಅವರು ಕರೆ ನೀಡಿದರು. ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಪೂವಣ್ಣ ಪ್ರಜಾಪ್ರಭುತ್ವ ದಿನದ ಮಹತ್ವವನ್ನು ತಿಳಿಸಿದರು.
ಸ್ವಪ್ನ ಪಿ. ಸಿ ಪ್ರಾಸ್ತಾವಿಕವಾಗಿ
ಮಾತನಾಡಿ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಯುವ ಸಂಸತ್ತು ಸಭೆಗೆ ಇಂದು ಚಾಲನೆ ನೀಡಲಾಗುತ್ತಿದೆ, ದಿನಾಂಕ 16.09.2026 ರಿಂದ 10.10.2026 ರ ವರೆಗೆ ತಾಲೂಕು ಮಟ್ಟದ ಯುವ ಸಂಸತ್ತು ಚರ್ಚಾ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು
ಸುಮಯ್ಯ ಕೆ.ಎಂ ಸ್ವಾಗತಿಸಿ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಕಾಳೀಮಾಡ ಪ್ರಶಾಂತ್, ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಪೂವಣ್ಣ,ವಿರಾಜಪೇಟೆ ಸರ್ವೋದಯ ಕಾಲೇಜಿನ ಪ್ರಾಂಶುಪಾಲೆ ಮಿನಿ, ವಿವಿಧ ಇಲಾಖೆಯ ಅಧಿಕಾರಿಗಳು,ದಲಿತ ಸಂಘದ ಮುಖಂಡರು,ಸಿ ಆರ್ ಪಿ ವಾಸುವರ್ಮ, ಕರ್ತಮಾಡ ರಶಿಕ, ಮೂಕಳೇರ ಸುಮಿತ್ರಾ,ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.