Kodagu

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ: ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮೊಹಮ್ಮದ್ ಖುರೈಶಿ ಆಗ್ರಹ

admincoorgdaily

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ: ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮೊಹಮ್ಮದ್ ಖುರೈಶಿ ಆಗ್ರಹ
ನಾಪೋಕ್ಲು:ಕೊಡಗು ಜಿಲ್ಲೆಯ ಕೊಡ್ಲಿಪೇಟೆ ಸಮೀಪದ ಬ್ಯಾಡಗೊಟ್ಟ ಸೇರಿದಂತೆ ವಿವಿಧ ಭಾಗಗಳಲ್ಲಿ ಮತದಾರರ ಪಟ್ಟಿಪರಿಷ್ಕರಣೆ ನೆಪದಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಅಳಿಸಿಹಾಕುವ ದುರುದ್ದೇಶಪೂರಿತ ಯತ್ನ ನಡೆಯುತ್ತಿರುವುದು ಅತ್ಯಂತ ಖಂಡನೀಯ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಕಾಂಗ್ರೆಸ್ ಮುಖಂಡ ಹಾಗೂ ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮೊಹಮ್ಮದ್ ಖುರೈಶಿ ಆಗ್ರಹಿಸಿದ್ದಾರೆ.

 ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಬದ್ಧವಾಗಿ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕಿದೆ. ಆದರೆ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಹುನ್ನಾರ ನಡೆದಿರುವುದು ಗಂಭೀರ ಕೃತ್ಯವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಇಂತಹ ಅಕ್ರಮಗಳ ಕುರಿತು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಡಳಿತ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳು ಹಾಗೂ ಇದರ ಹಿಂದಿರುವ ಕಿಡಿಗೇಡಿಗಳ ವಿರುದ್ಧ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಮೊಹಮ್ಮದ್ ಖುರೈಶಿ ಒತ್ತಾಯಿಸಿದ್ದಾರೆ.