Kodagu

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ

admincoorgdaily

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ
ಸೋಮವಾರಪೇಟೆ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಬೆಲೆ ಇಳಿಕೆಗೆ ಆಗ್ರಹಿಸಿ ಸೋಮವಾರಪೇಟೆ ತಾಲೂಕು ಜೆಡಿಎಸ್ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ಸೋಮವಾರಪೇಟೆ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳ ಬೆಲೆ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿಕೆಯನ್ನು ಖಂಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸೋಮವಾರಪೇಟೆ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ನಾಗರಾಜು, ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಲಾಗುತ್ತಿದ್ದು, ಇದರಿಂದ ರೈತರು, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಬೆಲೆ ಏರಿಕೆ ನಿಯಂತ್ರಿಸಿ, ರೈತರಿಗೆ ಪಶು ಆಹಾರ ಸಬ್ಸಿಡಿ ನೀಡುವಂತೆ ಒತ್ತಾಯಿಸಿದರು.

ಜೆಡಿಎಸ್ ಮುಖಂಡ ಹೊಸಬಿಡು ಹೂವಯ್ಯ ಮಾತನಾಡಿ, ನಂದಿನಿ ಉತ್ಪನ್ನಗಳ ಬೆಲೆ ಹಾಗೂ ಬಸ್ ಪ್ರಯಾಣ ದರವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಬಳಿಕ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಕೃಷ್ಣಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕೊಡಗು ಜಿಲ್ಲಾ ಜೆಡಿಎಸ್ ವಕ್ತಾರ ಆದರ್ಶ್ ತಮ್ಮಯ್ಯ, ಜಯನಂದ, ಮಂದಣ್ಣ, ಜಿಲ್ಲಾ ಸಮನ್ವಯ ಸಮಿತಿ ಸದಸ್ಯ ಪ್ರವೀಣ್, ಯುವ ಮುಖಂಡ ಸ್ವಾಗತ್ ಕುಶಾಲಪ್ಪ, ಸಂದೀಪ್ ಕೂಗೂರು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಖಂಡ ಆದಿಲ್ ಪಾಷ, ಶನಿವಾರ ಸಂತೆ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.