ಕಡವೆ ಬೇಟೆ: 40 ಕೆಜಿ ಮಾಂಸ, ನಾಡ ಬಂದೂಕು ವಶ - ಓರ್ವ ಸೆರೆ
admincoorgdaily

ಕರಿಕೆ(ಕೂರ್ಗ್ ಡೈಲಿ): ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಓರ್ವನನ್ನು ಬಂಧಿಸಿದ್ದಾರೆ.
ಕರಿಕೆ ತೋಟಮ್ ನ ನಿವಾಸಿ ಸಿದ್ದು (35) ಬಂಧಿತ. ಉಳಿದ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.
ಬಂಧಿತನಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಕಾಸರಗೋಡು ವಲಯದ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ., ಪ್ರವೀಣ್ ಕುಮಾರ್ ತಂಡ ಭಾಗವಹಿಸಿತ್ತು.