Kodagu

ಕಾವೇರಿ ತುಲಾ ಸಂಕ್ರಮಣ ಹಿನ್ನೆಲೆ: 20 ಕಿ.ಮೀ ಮದ್ಯ ನಿಷೇಧ

admincoorgdaily

ಕಾವೇರಿ ತುಲಾ ಸಂಕ್ರಮಣ ಹಿನ್ನೆಲೆ:  20 ಕಿ.ಮೀ ಮದ್ಯ ನಿಷೇಧ
ಮಡಿಕೇರಿ:ತಲಕಾವೇರಿಯಲ್ಲಿ ಅ. 17 ರಂದು ನಡೆಯಲಿರುವ ತುಲಾ ಸಂಕ್ರಮಣ ತೀರ್ಥೋದ್ಭವ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಅ. 17 ರಂದು ರಾತ್ರಿ 7.50ಕ್ಕೆ ತೀರ್ಥೋದ್ಭವ ನಡೆಯಲಿದೆ. ಈ ಪುಣ್ಯ ಕ್ಷಣಕ್ಕೆ ಸಾಕ್ಷಿಯಾಗಲು ರಾಜ್ಯ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ 15 ರಿಂದ 20 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಜಾತ್ರೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯ ಮಾರಾಟ ನಿಷೇಧಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಪ್ರಸ್ತಾವನೆಯನ್ನು ಪುರಸ್ಕರಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸೋಮಶೇಖರ್ ಎಸ್.ಜೆ. ಅವರು ಅಬಕಾರಿ ಕಾಯ್ದೆ 1965 ರ ಕಲಂ 21 ರನ್ವಯ ಆದೇಶ ಹೊರಡಿಸಿದ್ದಾರೆ.

ಅ. 17 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ 20 ಕಿ.ಮೀ ಸುತ್ತಮುತ್ತಲಿನ ಪ್ರದೇಶದಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್, ಕ್ಲಬ್‌ಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.