ಕುಶಾಲನಗರ : ಅದ್ದೂರಿಯಾಗಿ ಜರುಗಿದ ಶ್ರೀ ಗಣಪತಿ ದೇವಾಲಯದ ವಾರ್ಷಿಕ ಬ್ರಹ್ಮ ರಥೋತ್ಸವ
admincoorgdaily

ಕುಶಾಲನಗರ : ಐತಿಹಾಸಿಕ ಹಿನ್ನೆಲೆ ಹೊಂದಿರುವ, ಇಲ್ಲಿನ ಜನರ ಆರಾಧ್ಯ ದೈವ ಶ್ರೀ ಗಣಪತಿ ದೇವಾಲಯದ 106ನೇ ವಾರ್ಷಿಕ ಬ್ರಹ್ಮ ರಥೋತ್ಸವ ಶುಕ್ರವಾರ ಸಹಸ್ರಾರು ಭಕ್ತಾದಿಗಳ ನಡುವೆ ಶ್ರದ್ಧಾಭಕ್ತಿಯೊಂದಿಗೆ ಅದ್ದೂರಿಯಾಗಿ ಜರುಗಿತು.
ಅಯ್ಯಪ್ಪ ಸ್ವಾಮಿ ವೃತಧಾರಿಗಳ ಜಯಘೋಷ, ಭಕ್ತರ ಉತ್ಸಾಹದ ಮಧ್ಯೆ ಶ್ರೀ ಗಣಪತಿ ದೇವರ ರಥವನ್ನು ಎಳೆದು ಭಕ್ತರು ತಮ್ಮ ಭಕ್ತಿ ಮೆರೆದರು.
ಶ್ರೀ ಮಹಾಗಣಪತಿ ದೇವಾಲಯ ಸೇವಾ ಸಮಿತಿ ವತಿಯಿಂದ
ಕಾರ್ತೀಕ ಕೃಷ್ಣ ಪಕ್ಷದಲ್ಲಿ ಸಲ್ಲುವ ಶುಭ ಲಗ್ನದಲ್ಲಿ ಮಧ್ಯಾಹ್ನ 1 ಗಂಟೆಗೆ ಶ್ರೀ ಗಣಪತಿ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.ರಥ ಬಲಿ ಮತ್ತು ಪೂಜೆ ಹಾಗೂ ಮಹಾಮಂಗಳಾರತಿ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ದೇವಾಲಯದಲ್ಲಿ ಸಾಂಪ್ರದಾಯಿಕ ಆಚರಣೆಗಳನ್ನು ನೆರವೇರಿಸಿ ದೇವರ ಉತ್ಸವ ಮೂರ್ತಿಯನ್ನು ಮಂಗಳವಾದ್ಯಗಳ ಜೊತೆಗೆ ದೇವಾಲಯದಿಂದ ಹೊರತಂದು ಭಕ್ತರ ಜಯಘೋಷಗಳ ಮಧ್ಯೆ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.
ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ರಥವನ್ನು ಗಣಪತಿ ದೇವಾಲಯ ದಿಂದ ರಥ ಬೀದಿ ಮೂಲಕ ಆಂಜನೇಯ ದೇವಸ್ಥಾನದ ವರೆಗೆ ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು.ಜೈ,ಜೈ ಗಣೇಶ ಎಂದು ಜಯಕಾರ ಹಾಕಿದರು.
ದೇವಾಲಯದ ಪ್ರಧಾನ ಅರ್ಚಕ ಆರ್.ಕೆ.ನಾಗೇಂದ್ರ ಬಾಬು ನೇತೃತ್ವದಲ್ಲಿ ವಿವಿಧ ಪೂಜಾ ವಿದಿ ವಿಧಾನಗಳನ್ನು ನೆರವೇರಿಸಲಾಯಿತು.
ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಕೆ.ದಿನೇಶ್ ಮತ್ತು ಕಾರ್ಯದರ್ಶಿ ಬಿ.ಕೆ.ಮುತ್ತಣ್ಣ ಹಾಗೂ ಖಜಾಂಜಿ ಎಸ್.ಕೆ.ಸತೀಶ್ ನೇತೃತ್ವದಲ್ಲಿ ದೇವಾಲಯದ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.
ಮೊದಲು ಪಕ್ಕದ ಊರಿಂದ ಬಂದಿದ್ದ ಗೋವುಗಳಿಗೆ ಗೋಪೂಜೆ ನೆರವೇರಿಸಲಾಯಿತು.
ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು ಗಣಪತಿ ದೇವಾಲಯದ ಎದುರು ರಸ್ತೆಯಲ್ಲಿ ಕರ್ಪೂರ ಹರಡಿ ಬೆಂಕಿ ಹಚ್ಚಿ ಪ್ರಾರ್ಥನೆ ಸಲ್ಲಿಸಿದರು. ಮಾಲಾಧಾರಿಗಳ ಲಯಬದ್ಧ ಭಜನೆ ಈ ಸಂದರ್ಭದಲ್ಲಿ ಗಮನ ಸೆಳೆಯಿತು. ಮತ್ತೊಂದು ಕಡೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥದ ಮುಂದೆ ಹಣ್ಣುಕಾಯಿ ಮಾಡಿಸಲು ಮುಗಿಬಿದ್ದರು. ಅರ್ಚಕರು ತಾಳ್ಮೆಯಿಂದಲೇ ಭಕ್ತರು ತಂದಿದ್ದ ಹಣ್ಣುಕಾಯಿ ಸ್ವೀಕರಿಸಿ, ದೇವರಿಗೆ ಸಮರ್ಪಿಸಿ ಭಕ್ತರಿಗೆ ಹಿಂತಿರುಗಿಸಿದರು.ಹರಕೆ ಹೊತ್ತಿದ್ದ ಭಕ್ತರು ರಥ ಹೊರಡುವ ವೇಳೆ ರಸ್ತೆಯಲ್ಲಿ ಸಾವಿರಾರು ಈಡುಕಾಯಿ ಒಡೆದು ಭಕ್ತಿ ಪ್ರದರ್ಶಿಸಿದರು.
ನವದಂಪತಿಗಳು ಹಾಗೂ ಹರಕೆ ಹೊತ್ತ ಅವಿವಾಹಿತರು ರಥಕ್ಕೆ ಹಣ್ಣು ಜವನ ಎಸೆದು ತಮ್ಮ ಇಷ್ಟಾರ್ಥ ನೆರವೇರಿಸುವ ದೇವ ಎಂದು ಪ್ರಾರ್ಥನೆ ಸಲ್ಲಿಸಿದರು.
ದೇವಾಲಯ ವ್ಯಾಪ್ತಿಯಲ್ಲಿ ಬಾಳೆಹಣ್ಣು, ಜವನ ಮಾರಾಟ, ಪೈಪೋಟಿಗೆ ಬಿದ್ದಂತೆ ರಥಕ್ಕೆ ಜವನ ಎಸೆಯುವ ದೃಶ್ಯ ಸಾಮಾನ್ಯವಾಗಿತ್ತು.ಮೊದಲಿಗೆ ದೇವಾಲಯದಲ್ಲಿ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ, ಪುಷ್ಪಾಲಂಕಾರ, ರಥಪೂಜೆ ಹಾಗೂ ರಥ ಬಲಿ ಕಾರ್ಯಕ್ರಮಗಳು ನಡೆದವು.
ಈ ಜಾತ್ರೆಗೆ ಮೈಸೂರು ಹಾಗೂ ಹಾಸನ ಜಿಲ್ಲೆಗಳ ಗಡಿ ಭಾಗದ ಜನರು ಸೇರಿದಂತೆ ಕೊಡಗು ಜಿಲ್ಲೆಯ ಸಾವಿರಾರೂ ಜನರು ಪಾಲ್ಗೊಂಡಿದ್ದರು.ರಥೋತ್ಸವದ ಅಂಗವಾಗಿ ಗಣಪತಿ ದೇವಸ್ಥಾನ ಹಾಗೂ ಪಟ್ಟಣವನ್ನು ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು.ಪುರಸಭೆಯ ಪೌರಕಾರ್ಮಿಕರು ಪಟ್ಟಣವನ್ನು ಶುಚ್ಚಿಗೊಳಿಸಿದರು.ಜನಜಂಗುಳಿ ಮಧ್ಯೆ ಯುವಜನರು ಸೆಲ್ಫಿ ಕ್ಲಿಕ್ಕಿಸುವ ದೃಶ್ಯ ಸಾಮಾನ್ಯವಾಗಿತ್ತು. ಭಕ್ತರಿಗೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
ರಥೋತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಶಾಸಕ ಭೇಟಿ : ಶಾಸಕ ಡಾ.ಮಂತರ್ ಗೌಡ ಗಣಪತಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.ಆರತಿ ಹಾಗೂ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು.
ಸಮಿತಿಯ ಉಪಾಧ್ಯಕ್ಷ ಆರ್.ಬಾಬು, ಕಾರ್ಯದರ್ಶಿ ಬಿ.ಕೆ.ಮುತ್ತಣ್ಣ, ಖಜಾಂಚಿ ಎಸ್.ಕೆ.ಸತೀಶ್,ಸಹ ಕಾರ್ಯದರ್ಶಿ ಕೆ.ಎನ್.ದೇವರಾಜ್, ನಿರ್ದೇಶಕರಾದ
ವಿ.ಡಿ. ಪುಂಡಾರೀಕಾಕ್ಷ,ವಿ.ಪಿ.ಶಶಿಧರ್, ಟಿ.ಆರ್.ಶರವಣಕುಮಾರ್, ಎಚ್.ಎಂ.ಚಂದ್ರು,
ವಿಶೇಷ ಆಹ್ವಾನಿತರಾದ ಎಚ್.ಎನ್.ರಾಮಚಂದ್ರ, ಡಿ.ಅಪ್ಪಣ, ಡಿ.ಸಿ.ಜಗದೀಶ್, ಕೆ.ಎನ್.ಸುರೇಶ್, ಕೆ.ಸಿ.ನಂಜುಂಡ ಸ್ಚಾಮಿ, ಎಂ.ಮುನಿರಾಜು,ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸ್ ರಾವ್ ಇದ್ದರು.