Kodagu

ಮಡಿಕೇರಿ ದಸರಾ; ದಶಮಂಟಪಗಳಲ್ಲಿ ಡಿಜೆ ಅಳವಡಿಕೆ,ಹೈಕೋರ್ಟ್ ನಲ್ಲಿ ವಿಚಾರಣೆ ಮುಂದೂಡಿಕೆ

admincoorgdaily

ಹೈಕೋರ್ಟ್
ಮಡಿಕೇರಿ;ವಿಜಯದಶಮಿ ದಿನ ಶೋಭಾಯಾತ್ರೆ ನಡೆಸುವ ದಶಮಂಟಪಗಳಲ್ಲಿ ಡಿಜೆ ಅಳವಡಿಸುವ ವಿಚಾರದಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನವೆಂಬರ್ 16ಕ್ಕೆ ಮುಂದೂಡಲಾಗಿದೆ.

ಜಿಲ್ಲಾಡಳಿತಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಆರೋಪಿಸಿ ದಶಮಂಟಪ ಸಮಿತಿ ಅಧ್ಯಕ್ಷ ಪಾಂಡಿರ ಪೂಣಚ್ಚ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸ್ವೀಕರಿಸಿದ್ದ ನ್ಯಾಯಾಧೀಶರು, ಈ ಬಗ್ಗೆ ಜಿಲ್ಲಾಧಿಕಾರಿಗಳೇ ಆದೇಶ ಹೊರಡಿಸಿ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ಸೂಚಿಸಿದ್ದರು.

 ವಿಚಾರಣೆ ಬಂದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ ಎಂದು ಅರ್ಜಿದಾರರು ಹೇಳಿದಾಗ ಆಕ್ಷೇಪ ವ್ಯಕ್ತಪಡಿಸಿದ ಹಿರಿಯ ವಕೀಲ ಅಮೃತೇಶ್ ಅವರು, ಜಿಲ್ಲಾಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿರುವುದಾಗಿ ನ್ಯಾಯಾಧೀಶರ ಗಮನಕ್ಕೆ ತಂದರು.
ಸುಪ್ರೀಂ ಕೋರ್ಟ್ ಆದೇಶದ ಅನ್ವಯ ದಶಮಂಟಪಗಳು ಡಿಜೆ ಮತ್ತು ಲೇಸರ್ ಲೈಟ್‌ಗೆ ಸಂಬಂಧಿಸಿದಂತೆ ಕಾನೂನು ಪಾಲಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಅದನ್ನು ಪಾಲಿಸದಿದ್ದಲ್ಲಿ ನ್ಯಾಯಾಲಯದಿಂದಲೇ ಕ್ರಮ ಜರುಗಿಸುವುದಾಗಿ ಅಮೃತೇಶ್ ಅವರು ನ್ಯಾಯಾಲಯದ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನವೆಂಬರ್ 16ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶಿಸಿದರು.