ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಹಲವು ಮಹಿಳೆಯರು ಸೇರ್ಪಡೆ
admincoorgdaily

ವಿರಾಜಪೇಟೆ, ಸೆ. 5: ವಿರಾಜಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ವಿರಾಜಪೇಟೆಯ ಕೆ.ಕೆ ಗ್ರೂಪ್ ಕಟ್ಟಡದ ಸಭಾಂಗಣದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎ.ಎಸ್. ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಕ್ಕಂಡ ರೂಪ ಭೀಮಯ್ಯ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ, ಉಪಾಧ್ಯಕ್ಷೆ ಪದವಿ ಧನ್ಯ ಭಾಗವಹಿಸಿದ್ದರು.
ವಿರಾಜಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಳಮಾಂಡ ನಯನಾ ಜಗತ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಇತರ ಪಕ್ಷಗಳ ಹಲವಾರು ಮಹಿಳಾ ಪ್ರಮುಖರು ಹಾಗೂ ಕಾರ್ಯಕರ್ತರು ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಇದೇ ವೇಳೆ ವಿರಾಜಪೇಟೆ ಬ್ಲಾಕ್ ಮತ್ತು ವಿವಿಧ ವಲಯಗಳಿಗೆ ನೂತನ ಮಹಿಳಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಪತ್ರ ಹಸ್ತಾಂತರಿಸಲಾಯಿತು.
ಪಕ್ಷಕ್ಕೆ ಸೇರ್ಪಡೆಯಾದವರಿಗೆ ಕಾಂಗ್ರೆಸ್ ಬಾವುಟ ನೀಡಿ, ಶಾಲು ಹೊದಿಸಿ ಶಾಸಕ ಎ.ಎಸ್. ಪೊನ್ನಣ್ಣ ಅವರು ಪಕ್ಷಕ್ಕೆ ಬರಮಾಡಿಕೊಂಡರು. ಮಾತನಾಡಿದ ಅವರು, ಹೊಸ ಮಹಿಳಾ ಸದಸ್ಯರ ಸೇರ್ಪಡೆಯಿಂದ ಪಕ್ಷ ಮತ್ತಷ್ಟು ಬಲಗೊಂಡಿದೆ. ಎಲ್ಲರೂ ಸೇರಿ ಜನಪರ ಕೆಲಸ ಮಾಡುತ್ತಾ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಮಹಿಳೆಯರು ರಾಜಕೀಯ ಕ್ಷೇತ್ರದಲ್ಲೂ ಪ್ರಮುಖ ಪಾತ್ರ ವಹಿಸುತ್ತಿದ್ದು, ಸಾಮಾಜಿಕ ನ್ಯಾಯ ಮತ್ತು ಸಮಾನ ಸ್ಥಾನಮಾನ ಕಾಂಗ್ರೆಸ್ ಸಿದ್ಧಾಂತವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಮಹಿಳಾ ಅಧ್ಯಕ್ಷೆ ಪುಷ್ಪಲತಾ ಮತ್ತು ಬ್ಲಾಕ್ ಅಧ್ಯಕ್ಷೆ ನಯನಾ ಜಗತ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಬಗರ್ ಹುಕುಂ ಅಧ್ಯಕ್ಷ ನೇರವಂಡ ಉಮೇಶ್, ಮಹೇಶ್, ವಿರಾಜಪೇಟೆ ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಡಿಸಿಸಿ ಸದಸ್ಯ ಮುಕಟೀರ ಸಂದೀಪ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಪ್ರಚಾರ ಸಮಿತಿ ಅಧ್ಯಕ್ಷ ಮತೀನ್, ಮಾಜಿ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಉಪಾಧ್ಯಕ್ಷೆ ಫಸಿಯಾ ತಬ್ಸುಂ ಸೇರಿದಂತೆ ಮಹಿಳಾ ಕಾಂಗ್ರೆಸ್ ಸದಸ್ಯರು ಉಪಸ್ಥಿತರಿದ್ದರು.