Kodagu

ಮಾತೃ ವಂದನ ಯೋಜನೆ ನೋಂದಣಿ ಅಭಿಯಾನ ಹಾಗೂ ಸೀಮಂತ ಕಾರ್ಯಕ್ರಮ: ಅರೆಕಾಡು ಗ್ರಾಮದಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಅರಿವು ಕಾರ್ಯಕ್ರಮ

admincoorgdaily

ಮಾತೃ ವಂದನ ಯೋಜನೆ ನೋಂದಣಿ ಅಭಿಯಾನ ಹಾಗೂ ಸೀಮಂತ ಕಾರ್ಯಕ್ರಮ: ಅರೆಕಾಡು ಗ್ರಾಮದಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಅರಿವು ಕಾರ್ಯಕ್ರಮ
ಮಡಿಕೇರಿ:-ಅರೆಕಾಡು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪೋಷಣ್ ಮಾಸಾಚರಣೆ ಅಂಗವಾಗಿ ಅರಿವು ಕಾರ್ಯಕ್ರಮ, ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ನೋಂದಣಿ ಅಭಿಯಾನ ಹಾಗೂ ಸೀಮಂತ ಕಾರ್ಯಕ್ರಮ ನಡೆಯಿತು.
 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾಧಿಕಾರಿ ಪ್ರಸನ್ನ ಕುಮಾರ್ ಅವರು ಮಾತನಾಡಿ, ಅರ್ಹ ಫಲಾನುಭವಿಗಳು ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ಸೌಲಭ್ಯ ಪಡೆಯಲು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರು. 

 ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಅವರು ಮಾತನಾಡಿ, ಪೌಷ್ಟಿಕಾಂಶದ ಕೊರತೆ ಮತ್ತು ರಕ್ತಹೀನತೆ ತಡೆಗಟ್ಟುವ ಉದ್ದೇಶದಿಂದ ಪೋಷಣ್ ಮಾಸಾಚರಣೆಗೆ ಮಹತ್ವ ನೀಡಲಾಗುತ್ತಿದೆ. ಮಕ್ಕಳಿಗೆ ಸ್ಥಳೀಯವಾಗಿ ದೊರೆಯುವ ಪೌಷ್ಟಿಕ ಆಹಾರ ನೀಡಬೇಕು ಹಾಗೂ ಜಂಕ್ ಫುಡ್‍ನಿಂದ ದೂರವಿಡಬೇಕು ಎಂದು ಸಲಹೆ ನೀಡಿದರು.
 ದಿನನಿತ್ಯದ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ನಡಿಗೆ ಸೇರಿದಂತೆ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕಾರ್ಬೋಹೈಡ್ರೇಟ್‍ಯುಕ್ತ ಆಹಾರವನ್ನು ಮಿತವಾಗಿ ಸೇವಿಸಿ, ದೇಹಕ್ಕೆ ಅಗತ್ಯವಿರುವಷ್ಟು ಮಾತ್ರ ಆಹಾರ ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದರು. 
ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಪದ್ಧತಿಯಲ್ಲಿ ಆರೋಗ್ಯಕರ ಬದಲಾವಣೆ ಮಾಡಿಕೊಳ್ಳುವಂತೆ ಕರೆ ನೀಡಿದರು.
 ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಮೇಲ್ವಿಚಾರಕರಾದ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ, ಅಧಿಕಾರಿಗಳು ನೀಡಿದ ಮಾಹಿತಿಯನ್ನು ಪ್ರತಿಯೊಂದು ಅಂಗನವಾಡಿ ಕೇಂದ್ರದಲ್ಲಿಯೂ ಕಾರ್ಯರೂಪಕ್ಕೆ ತರುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು. 
ಮಕ್ಕಳ ಬೆಳವಣಿಗೆಯ ಮೈಲಿಗಲ್ಲುಗಳನ್ನು ನಿಯಮಿತವಾಗಿ ಗಮನಿಸಿ, ಯಾವುದೇ ಬೆಳವಣಿಗೆ ವಿಳಂಬ ಅಥವಾ ಅಂಗವೈಕಲ್ಯದ ಲಕ್ಷಣಗಳು ಕಂಡುಬಂದಲ್ಲಿ ಆರಂಭಿಕ ಹಂತದಲ್ಲಿಯೇ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ ಮಾಡಿದರು. 

ಮಗು ಗರ್ಭಧಾರಣೆಯಿಂದ ಎರಡು ವರ್ಷದವರೆಗೆ ಇರುವ ಮೊದಲ 1 ಸಾವಿರ ದಿನಗಳ ಮಹತ್ವವನ್ನು ವಿವರಿಸಿದ ಅವರು, ಈ ಅವಧಿಯಲ್ಲಿ ತಾಯಿ ಮತ್ತು ಮಗುವಿಗೆ ಅಗತ್ಯವಿರುವ ಪೌಷ್ಟಿಕ ಆಹಾರ ನೀಡುವುದು ಅತ್ಯಂತ ಮುಖ್ಯ. ಪೌಷ್ಟಿಕ ಆಹಾರದ ಜೊತೆಗೆ ಮಕ್ಕಳ ಮಾನಸಿಕ ಬೆಳವಣಿಗೆ ಹಾಗೂ ಭಾವನಾತ್ಮಕ ಸದೃಢತೆಗೆ ಪೂರಕವಾದ ವಾತಾವರಣ ಕಲ್ಪಿಸಬೇಕು ಎಂದು ತಿಳಿಸಿದರು. 
ಸ್ವಚ್ಛತೆ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಮಾಹಿತಿ ನೀಡಿದ ಅವರು, ಕಲುಷಿತ ಅಥವಾ ಕಲಬೆರಕೆ ಆಹಾರದಿಂದ ವಿವಿಧ ಕಾಯಿಲೆಗಳು ಉಂಟಾಗಿ ಅಪೌಷ್ಟಿಕತೆಗೆ ಕಾರಣವಾಗಬಹುದು. ಆದ್ದರಿಂದ ವೈಯಕ್ತಿಕ ನೈರ್ಮಲ್ಯದ ಜೊತೆಗೆ ಆಹಾರ ತಯಾರಿಸುವ ಸ್ಥಳ, ಪಾತ್ರೆಗಳು ಹಾಗೂ ಬಳಸುವ ವಸ್ತುಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದರು. 
ಕ್ಷಯರೋಗದ ಕುರಿತು ಮಾಹಿತಿ ನೀಡಿದ ಅವರು, ಎರಡು ವಾರಕ್ಕಿಂತ ಹೆಚ್ಚು ಕಾಲ ಕೆಮ್ಮು, ರಾತ್ರಿ ವೇಳೆ ಜ್ವರ ಹಾಗೂ ಬೆವರುವುದು, ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು, ತೂಕ ಇಳಿಕೆಯಾಗುವುದು ಮತ್ತು ಹಸಿವು ಕಡಿಮೆಯಾಗುವುದು ಮುಂತಾದ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಕಫ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. 
ಕ್ಷಯರೋಗಿಗಳಿಗೆ ಚಿಕಿತ್ಸೆ ಪೂರ್ಣಗೊಳ್ಳುವವರೆಗೆ ಪೌಷ್ಟಿಕ ಆಹಾರಕ್ಕಾಗಿ ಸರ್ಕಾರದಿಂದ ಮಾಸಿಕ ಒಂದು ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತದೆ ಎಂದರು. 

ಸಮುದಾಯ ಆರೋಗ್ಯ ಅಧಿಕಾರಿ ಪುಷ್ಪ ವಾಡಿಗೆರೆ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಂಕ್ ಫುಡ್ ಸೇವನೆ ಹೆಚ್ಚುತ್ತಿರುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಬೆಳಗಿನ ಉಪಾಹಾರವನ್ನು ಪೌಷ್ಟಿಕವಾಗಿ ಹಾಗೂ ಸಮರ್ಪಕವಾಗಿ ಸೇವಿಸಿ, ಮಧ್ಯಾಹ್ನ ಸಮತೋಲನ ಆಹಾರ ತೆಗೆದುಕೊಂಡು, ರಾತ್ರಿ ಹಗುರವಾದ ಆಹಾರ ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದರು. ನಾರಿನಂಶ, ಕಬ್ಬಿಣಾಂಶ, ವಿಟಮಿನ್‍ಗಳು ಹಾಗೂ ಪ್ರೊಟೀನ್‍ಯುಕ್ತ ಸಮತೋಲನ ಆಹಾರ ಸೇವಿಸುವಂತೆ ಕರೆ ನೀಡಿದರು.
ಮರಗೋಡು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಅರೆಕಾಡು ಗ್ರಾಮದ ಗ್ರಾಮಸ್ಥರು ಹಾಗೂ ಫಲಾನುಭವಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಪುಷ್ಪ ಪ್ರಾರ್ಥಿಸಿದರು. ಹರಿಣಾಕ್ಷಿ ನಿರೂಪಿಸಿದರು. ಅನಿಲ ಅವರು ಸ್ವಾಗತಿಸಿದರು. ಸವಿತಾ ವಂದಿಸಿದರು.