Kodagu

ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಕಾರ್ಯಾರಂಭಕ್ಕೆ ವೇಗ;ಅಧಿಕಾರಿಗಳೊಂದಿಗೆ ಶಾಸಕ ಡಾ. ಮಂತರ್ ಗೌಡ ಸಭೆ

admincoorgdaily

ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಕಾರ್ಯಾರಂಭಕ್ಕೆ ವೇಗ;ಅಧಿಕಾರಿಗಳೊಂದಿಗೆ ಶಾಸಕ ಡಾ. ಮಂತರ್ ಗೌಡ ಸಭೆ
ಮಡಿಕೇರಿ;
 ಕೊಡಗು ಜಿಲ್ಲೆಯ ಜನರಿಗೆ ಸುಧಾರಿತ ಹೃದಯ ಚಿಕಿತ್ಸಾ ಸೌಲಭ್ಯ ಒದಗಿಸುವ ಉದ್ದೇಶದಿಂದ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುತ್ತಿರುವ ಕ್ಯಾಥ್ ಲ್ಯಾಬ್ ಘಟಕದ ಲೋಕಾರ್ಪಣೆ ಹಾಗೂ ಕಾರ್ಯಾರಂಭಕ್ಕೆ ಸಂಬಂಧಿಸಿದಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ವಿಧಾನಸೌಧದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಯೋಜನೆಯ ಪ್ರಸ್ತುತ ಸ್ಥಿತಿಗತಿ, ಘಟಕದ ಸ್ಥಾಪನೆ, ಅಗತ್ಯ ಸಿದ್ಧತೆಗಳು ಹಾಗೂ ಕಾರ್ಯಾರಂಭದ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡ ಶಾಸಕರು, ಯೋಜನೆಯನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಅವರು, ಕೊಡಗು ಜಿಲ್ಲೆಯ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಜಿಲ್ಲೆಯಲ್ಲಿಯೇ ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ. ಕ್ಯಾಥ್ ಲ್ಯಾಬ್ ಆರಂಭದಿಂದ ಹೃದಯ ಸಂಬಂಧಿತ ಕಾಯಿಲೆಗಳಿಗೆ ಆಂಜಿಯೋಗ್ರಾಂ, ಆಂಜಿಯೋಪ್ಲಾಸ್ಟಿ ಸೇರಿದಂತೆ ಅಗತ್ಯ ಚಿಕಿತ್ಸೆಗಳು ಮಡಿಕೇರಿಯಲ್ಲಿಯೇ ಲಭ್ಯವಾಗಲಿವೆ. ಇದರಿಂದ ರೋಗಿಗಳು ಹೃದಯ ಚಿಕಿತ್ಸೆಗಳಿಗಾಗಿ ಮೈಸೂರು, ಮಂಗಳೂರು ಸೇರಿದಂತೆ ದೂರದ ನಗರಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗಲಿದೆ ಎಂದು ತಿಳಿಸಿದರು.

ವಿಶೇಷವಾಗಿ ತುರ್ತು ಹೃದಯ ಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ಈ ಸೌಲಭ್ಯ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸುಧಾರಿತ ವೈದ್ಯಕೀಯ ಸೇವೆಗಳು ಸ್ಥಳೀಯವಾಗಿಯೇ ದೊರೆಯುವಂತಾಗಬೇಕು ಎಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಕ್ಯಾಥ್ ಲ್ಯಾಬ್ ಘಟಕವು ಶೀಘ್ರವಾಗಿ ಕಾರ್ಯಾರಂಭ ಮಾಡುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು.

ಕೊಡಗು ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಈ ಯೋಜನೆಯು ಮಹತ್ವದ ಕೊಡುಗೆ ನೀಡಲಿದ್ದು, ಜಿಲ್ಲೆಯ ಜನರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.