Kodagu

ಬಕ್ಕ–ಹೊಸ್ಕೇರಿ ನೂತನ ಲಿಂಕ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡರಿಂದ ಭೂಮಿಪೂಜೆ

admincoorgdaily

ಬಕ್ಕ–ಹೊಸ್ಕೇರಿ ನೂತನ ಲಿಂಕ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡರಿಂದ ಭೂಮಿಪೂಜೆ
ಕುಶಾಲನಗರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಕ್ಕ–ಹೊಸ್ಕೇರಿ ಗ್ರಾಮಗಳನ್ನು ಸಂಪರ್ಕಿಸುವ ನೂತನ ಲಿಂಕ್ ರಸ್ತೆ ನಿರ್ಮಾಣ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಉತ್ತಮ ರಸ್ತೆ ಸಂಪರ್ಕವು ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗುವುದರ ಜೊತೆಗೆ ಸ್ಥಳೀಯ ನಿವಾಸಿಗಳ ದೈನಂದಿನ ಸಂಚಾರಕ್ಕೂ ಅನುಕೂಲ ಕಲ್ಪಿಸುತ್ತದೆ. ಈ ನಿಟ್ಟಿನಲ್ಲಿ ಕ್ಷೇತ್ರದ ವಿವಿಧ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಬಕ್ಕ–ಹೊಸ್ಕೇರಿ ಭಾಗದ ಗ್ರಾಮಸ್ಥರ ಬಹುದಿನದ ಸಂಪರ್ಕ ವ್ಯವಸ್ಥೆಯ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕೈಗೆತ್ತಿಕೊಳ್ಳಲಾಗಿರುವ ಈ ಕಾಮಗಾರಿಯು ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕರು ತಿಳಿಸಿದರು.