Kodagu

ಬೇಳೂರು ಪ್ರಜಾಸೇವಾ ಅಭಿಯಾನದಲ್ಲಿ 30ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ: ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಅಸಮಾಧಾನ

admincoorgdaily

ಬೇಳೂರು ಪ್ರಜಾಸೇವಾ ಅಭಿಯಾನದಲ್ಲಿ 30ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ: ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಅಸಮಾಧಾನ
ಸೋಮವಾರಪೇಟೆ: ತಾಲೂಕಿನ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಪ್ರಜಾಸೇವಾ ಅಭಿಯಾನದಲ್ಲಿ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 30ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

ಕಂದಾಯ, ಆಹಾರ, ಅರಣ್ಯ, ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ, ಸಣ್ಣ ನೀರಾವರಿ, ಶಿಕ್ಷಣ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು.

ಕಾಡಾನೆ ದಾಳಿಯಿಂದ ಉಂಟಾದ ಬೆಳೆಹಾನಿಗೆ ಪರಿಹಾರ ದೊರೆಯದಿರುವುದು, ಶಾಂತಳ್ಳಿ ಹೋಬಳಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ದುರಸ್ತಿ ಕಾರ್ಯಗಳು ನಡೆಯದಿರುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ಬದಿಯ ಕಾಡುಗಳನ್ನು ತೆರವುಗೊಳಿಸದ ಕಾರಣ ವಾಹನ ಅಪಘಾತಗಳು ಹೆಚ್ಚುತ್ತಿವೆ. ರಸ್ತೆ ಗುಂಡಿ ಮುಚ್ಚಲು 7 ಕೋಟಿ ರೂ. ಬಿಡುಗಡೆಯಾಗಿದ್ದರೂ ಯಾವ ರಸ್ತೆಗಳ ದುರಸ್ತಿ ಮಾಡಲಾಗಿದೆ? ಬಿಡುಗಡೆಯಾದ ಅನುದಾನ ಎಲ್ಲಿ ಬಳಕೆಯಾಗಿದೆ ಎಂದು ಗ್ರಾಮಸ್ಥರೊಬ್ಬರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರು.

ಕೆಂಚಮ್ಮನ ಬಾಣೆಯಲ್ಲಿ ಮನೆ ನಿರ್ಮಾಣಕ್ಕೆ ಬೇಳೂರು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು 12 ಸಾವಿರ ರೂ. ಲಂಚ ಪಡೆದಿದ್ದರೂ ಮನೆ ನಿರ್ಮಾಣ ಕಾರ್ಯ ಆರಂಭವಾಗಿಲ್ಲ ಎಂದು ಫಲಾನುಭವಿಯೊಬ್ಬರು ಶಾಸಕರಿಗೆ ದೂರು ನೀಡಿದರು. ಪಡಿತರ ಚೀಟಿಯ ಸಮಸ್ಯೆ ಪರಿಹರಿಸಲು ಆಹಾರ ಇಲಾಖೆಯ ಕಚೇರಿಗೆ ತೆರಳಿದರೆ ನಿರೀಕ್ಷಕರು ಸರಿಯಾಗಿ ಸ್ಪಂದಿಸುತ್ತಿಲ್ಲ. ಬಿಪಿಎಲ್ ಕಾರ್ಡ್ ಪಡೆಯುವ ಅರ್ಹತೆ ಇದ್ದರೂ ಈ ಬಗ್ಗೆ ವಿಚಾರಿಸಲು ಹೋದಾಗ ಸಿಬ್ಬಂದಿ ಗದರಿಸುತ್ತಾರೆ ಎಂದು ಮಹಿಳೆಯೊಬ್ಬರು ದೂರಿದರು.

ಅರಣ್ಯ ಇಲಾಖೆಯವರು ಕಾಡಾನೆಗಳನ್ನು ಖಾಸಗಿ ತೋಟಗಳತ್ತ ಓಡಿಸುತ್ತಿರುವುದರಿಂದ ಫಸಲಿಗೆ ಬಂದ ಕಾಫಿ ಗಿಡಗಳು ನಾಶವಾಗುತ್ತಿವೆ ಎಂದು ಐಗೂರು ಗ್ರಾಮದ ಕಾಫಿ ಬೆಳೆಗಾರರು ಅಳಲು ತೋಡಿಕೊಂಡರು. ಮೂವತೊಕ್ಲು ಗ್ರಾಮದಲ್ಲಿ 20 ಮನೆಗಳಿಗೆ ಹಕ್ಕುಪತ್ರ ನೀಡಲಾಗಿದ್ದು, ಉಳಿದ ಐದು ಮನೆಗಳಿಗೆ ಹಕ್ಕುಪತ್ರ ನೀಡದೆ ವಿಳಂಬ ಮಾಡಲಾಗುತ್ತಿದೆ ಎಂದು ಫಲಾನುಭವಿಗಳು ಗಮನ ಸೆಳೆದರು.

ಇದಲ್ಲದೆ ಬಿಪಿಎಲ್ ಕಾರ್ಡ್ ರದ್ದತಿ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮೆಯಾಗದಿರುವುದು, ವಿದ್ಯುತ್ ಸಂಪರ್ಕ ಹಾಗೂ ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸಾರ್ವಜನಿಕರು ಪ್ರಸ್ತಾಪಿಸಿದರು. ಈ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಶಾಸಕ ಡಾ.ಮಂತರ್ ಗೌಡ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು;

ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳು ಕೂಡ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಮನವಿಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕು. ಜನರಿಗೆ ಅಗತ್ಯವಿರುವುದು ಮೂಲಭೂತ ಸೌಲಭ್ಯಗಳು. ಅವುಗಳನ್ನು ಸಮರ್ಪಕವಾಗಿ ಒದಗಿಸದಿದ್ದರೆ ಸರ್ಕಾರದ ಹೊಸ ಯೋಜನೆಗಳು ಜನರಿಗೆ ತಲುಪಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸರ್ಕಾರದ ಯಾವುದೇ ಯೋಜನೆಗಳಡಿ ಸೌಲಭ್ಯ ಕಲ್ಪಿಸುವುದಕ್ಕಾಗಿ ಫಲಾನುಭವಿಗಳಿಂದ ಲಂಚ ಪಡೆಯುತ್ತಿರುವುದು ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಲೆನಾಡು ಅಭಿವೃದ್ಧಿ ಮಂಡಳಿ ನಿರ್ದೇಶಕ ಕೆ.ಎಂ.ಲೋಕೇಶ್, ಅಕ್ರಮ-ಸಕ್ರಮ ಸಮಿತಿ ಸದಸ್ಯ ಬಿ.ಬಿ.ಸತೀಶ್, ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.