ಮಳೆ ಹಾನಿ ಪ್ರದೇಶಗಳಿಗೆ ಎನ್.ಎಸ್.ಭೋಸರಾಜು ಭೇಟಿ, ಪರಿಶೀಲನೆ: ಕೊಡಗು ಜಿಲ್ಲೆಗೆ 100 ಕೋಟಿ ರೂ ಬಿಡುಗಡೆ:

ಮಳೆ ಹಾನಿ ಪ್ರದೇಶಗಳಿಗೆ ಎನ್.ಎಸ್.ಭೋಸರಾಜು ಭೇಟಿ, ಪರಿಶೀಲನೆ:  ಕೊಡಗು ಜಿಲ್ಲೆಗೆ  100 ಕೋಟಿ ರೂ ಬಿಡುಗಡೆ:

ಮಡಿಕೇರಿ:-ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ ಅವರು ಮಳೆ ಹಾನಿ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ವೀಕ್ಷಿಸಿದರು.  ಕುಶಾಲನಗರದ ಸೇತುವೆಗೆ ತೆರಳಿ ಕಾವೇರಿ ನೀರಿನ ಹರಿವು ಪ್ರಮಾಣ ವೀಕ್ಷಿಸಿದರು. ಬಳಿಕ ಕುಶಾಲನಗರದ ಚಂದ್ರಶೇಖರ ಅವರ ಮನೆಹಾನಿ ಪರಿಶೀಲಿಸಿದರು.  

ಬಳಿಕ ಕಾವೇರಿ ನದಿ ನೀರು ಹರಿಯುವ ಕಣಿವೆ ಬಳಿಯ ತೂಗು ಸೇತುವೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ವೀಕ್ಷಿಸಿದರು. ನಂತರ ರಂಗಸಮುದ್ರ ಹತ್ತಿರ ಕುಸಿಯುತ್ತಿರುವ ಸೇತುವೆ ಪರಿಶೀಲಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಬಾರಿ ಮೇ ಅಂತ್ಯದಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಮಳೆಯಿಂದ ಜಿಲ್ಲೆಯಲ್ಲಿ ಮನೆ, ಸೇತುವೆ, ರಸ್ತೆ ಸೇರಿದಂತೆ ಹಲವು ರೀತಿಯ ಪ್ರಾಕೃತಿಕ ವಿಕೋಪ ಸಂಭವಿಸಿದೆ ಎಂದರು. 

ಜಿಲ್ಲೆಯಲ್ಲಿ ಇನ್ನು ಎರಡು ತಿಂಗಳ ಕಾಲ ಹೆಚ್ಚಿನ ಮಳೆಯಾಗುವುದರಿಂದ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಬೇಕು ಎಂದು ಸಚಿವರು ಮನವಿ ಮಾಡಿದರು. 

    ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತ ಗಮನಹರಿಸಿದೆ ಎಂದು ತಿಳಿಸಿದರು. 

ಜಿಲ್ಲೆಯಲ್ಲಿ ಮೇ ಅಂತ್ಯದಿಂದ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆಗಳ ಹಾನಿಯಾಗಿದೆ. ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಮನೆ ಹಾನಿ ಸಂಬಂಧ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಳೆ ನಿಂತ ನಂತರ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. 

     ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿ ಬಗ್ಗೆ ಶಾಸಕರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೆ ವರದಿ ನೀಡಲಾಗುವುದು. ಮಳೆಹಾನಿಗೆ ಹೆಚ್ಚಿನ ಹಣ ಬಿಡುಗಡೆಗೆ ಮುಖ್ಯಮಂತ್ರಿ ಅವರನ್ನು ಕೋರಲಾಗುವುದು ಎಂದು ಸಚಿವರು ಹೇಳಿದರು. 

     ಸರ್ಕಾರದ ಬಳಿ ಹಣವಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅಡಚಣೆ ಇಲ್ಲ. ಸರ್ಕಾರ 8 ಸಾವಿರ ಕೋಟಿ ರೂ. ವನ್ನು ಅಭಿವೃದ್ಧಿ ಕೆಲಸಕ್ಕಾಗಿ ಬಿಡುಗಡೆ ಮಾಡಿದೆ. ಹಾಗೆಯೇ ಕೊಡಗು ಜಿಲ್ಲೆಗೂ ಸಹ 100 ಕೋಟಿ ರೂ. ಬಿಡುಗಡೆ ಮಾಡಿದೆ. ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಚಿವರು ವಿವರಿಸಿದರು.  

     ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿ ಇತ್ತೀಚೆಗೆ ಉದ್ಘಾಟನೆಯಾದ ಪುರಸಭೆ ಕಟ್ಟಡವನ್ನು ವೀಕ್ಷಿಸಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾದರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.  

     ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಮರಣ ಪ್ರಮಾಣ ಪತ್ರ ನೀಡಲು ಒಂದು ತಿಂಗಳಿಗೂ ಹೆಚ್ಚು ಕಾಲ ತೆಗೆದುಕೊಳ್ಳುವುದು ಸರಿಯಲ್ಲ. ಇಂದಿನ ಸಾಮಾಜಿಕ ಜಾಲತಾಣದ ಯುಗದಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವುದು ಅತೀ ಮುಖ್ಯವಾಗಿದೆ ಎಂದರು. 

     ಮೇ ಮತ್ತು ಜೂನ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದರು. 

      ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ಕುಶಾಲನಗರ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇತರರು ಇದ್ದರು.