ಮಾದಾಪುರದ ಸರಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರ
admincoorgdaily

ಸೋಮವಾರಪೇಟೆ: ತಾಲ್ಲೂಕಿನ
ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ
ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಏಳು ದಿನಗಳ ಕಾಲ ಹಮ್ಮಿಕೊಂಡಿರುವ
ವಾರ್ಷಿಕ ವಿಶೇಷ ಶಿಬಿರಕ್ಕೆ
ಭಾನುವಾರ( ಅ.18 ರಂದು ) ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಿಂದಲೇ ಸಮಯಪ್ರಜ್ಞೆಯನ್ನು ರೂಢಿಸಿಕೊಳ್ಳಬೇಕು. ಸಾಮಾಜಿಕ ಜಾಗೃತ ಮನೋಭಾವವನ್ನು ಬೆಳೆಸಿಕೊಂಡು ನಮ್ಮ ಸುತ್ತಮುತ್ತಲಿನ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನವನ್ನು ಪಡಬೇಕು. ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು, ವಿದ್ಯಾರ್ಥಿ ಜೀವನದಲ್ಲಿ ಪರಸ್ಪರ ಸಹಕಾರ , ಶಿಸ್ತು - ಸಂಯಮ, ತಾಳ್ಮೆ ಅಗತ್ಯ ಎಂದರು.
ಕೊಡಗಿನಲ್ಲಿ ಕಳೆದ ಎಂಟು ವರ್ಷಗಳ ಹಿಂದೆ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ನಿರಾಶ್ರಿತರಿಗೆ ಜಂಬೂರಿನಲ್ಲಿ ಕಲ್ಪಿಸಿರುವ ಪುನರ್ವಸತಿ ಪ್ರದೇಶದ
ಫೀಲ್ಡ್ ಮಾರ್ಷಲ್ ಕೆ. ಎಂ ಕಾರ್ಯಪ್ಪ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ ಜನರ ಬದುಕು, ಅವರ ಕಷ್ಟ - ಸುಖ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದರು.
ನಿವೃತ್ತ ಡಿ. ಸಿ. ಪಿ.ಪೂಣಚ್ಚ ಮಾತನಾಡಿ, ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿ ದೃಢ ಸಂಕಲ್ಪದಿಂದ ನಿರಂತರ ಅಧ್ಯಯನ ನಡೆಸಿದರೆ ಭವಿಷ್ಯದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.
ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎ.ಎಂ. ಭರತ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಕಲಿಕೆಯೊಂದಿಗೆ ಉತ್ತಮ ಸಾಧಕರಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಕರ್ನಲ್ ಬಿ.ಜಿ.ವಿ. ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ನಾಯಕತ್ವ, ಸಂಸ್ಕಾರ ಹಾಗೂ
ಸೇವಾ ಮನೋಭಾವನೆ ಬೆಳೆಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕೆಂದು ಕಿವಿಮಾತು ಹೇಳಿದರು.
ಪ್ರಾಸ್ತವಿಕವಾಗಿ ಮಾತನಾಡಿದ
ಪ್ರಾಂಶುಪಾಲ ಸಿ.ಜಿ. ಮಂದಪ್ಪ , ಎನ್ನೆಸ್ಸೆಸ್ ಧ್ಯೇಯೋದ್ದೇಶಗಳನ್ನು ತಿಳಿಸಿದರು.
ಶಿಬಿರಾಧಿಕಾರಿ ಮನೋಹರ್ ಪ್ರತಿಜ್ಞಾವಿಧಿಯನ್ನು ಬೋಧಿಸಿದರೆ ಉಪನ್ಯಾಸಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ರಾಜ ಸುಂದರಂ ವಂದಿಸಿದರು. ಕಾರ್ಯಕ್ರಮದಲ್ಲಿ ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ಬಿ.ಎ. ಕರುಂಬಯ್ಯ ಉಪಸ್ಥಿತರಿದ್ದರು. ಉಪನ್ಯಾಸಕಮೋಹನ್ ಹೆಗ್ಡೆ, ಸೀಮಾ ಕೆ ಕೆ , ಪ್ರಫುಲ್ಲ ಕುಮಾರಿ ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು.