ಕೈಕೇರಿ ಶಾಲೆಯಲ್ಲಿ ಎನ್ಎಸ್ಎಸ್ನಿಂದ ಸ್ವಚ್ಛತಾ ಅಭಿಯಾನ, ಆರೋಗ್ಯ ಜಾಗೃತಿ ಕಾರ್ಯಕ್ರಮ
admincoorgdaily

ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ಇತ್ತೀಚೆಗೆ ಕೈಕೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಅಭಿಯಾನದ ಅಂಗವಾಗಿ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿದ್ದು, ಸುಮಾರು 50 ಎನ್ಎಸ್ಎಸ್ ಸ್ವಯಂಸೇವಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಶಾಲಾ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತೆ, ನೈರ್ಮಲ್ಯ ಹಾಗೂ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.
ಇದೇ ಸಂದರ್ಭದಲ್ಲಿ ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಸ್ಪತ್ರೆಯ ಸಿಬ್ಬಂದಿಗಳಾದ ಚಂದ್ರಶೇಖರ್ ಹಾಗೂ ವಿನಿಲ್ ವಿದ್ಯಾರ್ಥಿಗಳಿಗೆ ಆರೋಗ್ಯದ ಕಾಳಜಿ, ವೈಯಕ್ತಿಕ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತು ಮಾಹಿತಿ ನೀಡಿದರು. ಸಮಾಜಮುಖಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಹೊಣೆಗಾರಿಕೆ, ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯದ ಕುರಿತು ಅರಿವು ಮೂಡಿಸಲಾಯಿತು.
ರಾಷ್ಟ್ರೀಯ ಸೇವಾ ಯೋಜನೆಯ 'ನನಗಲ್ಲ, ನಿನಗಾಗಿ' ಎಂಬ ಧ್ಯೇಯವಾಕ್ಯಕ್ಕೆ ಅನುಗುಣವಾಗಿ ಸ್ವಯಂಸೇವಕರು ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಯುವಜನರಲ್ಲಿ ಸಾಮಾಜಿಕ ಕಳಕಳಿ ಮತ್ತು ಸೇವಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಮಾದರಿ ಕಾರ್ಯ ನಿರ್ವಹಿಸಿದರು. ಕಾಲೇಜಿನ ಎನ್ಎಸ್ಎಸ್ ಅಧಿಕಾರಿಗಳಾದ ವಿಪ್ರ ನೀಲಮ್ಮ ಹಾಗೂ ಚೇತನ್ ಚಿಣ್ಣಪ್ಪ ಕಾರ್ಯಕ್ರಮವನ್ನು ಸಂಯೋಜಿಸಿ ನಡೆಸಿಕೊಟ್ಟರು.
ಈ ಸಂದರ್ಭ ಕೈಕೇರಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಇಂದಿರಾ ಹಾಗೂ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಾದಯ್ಯ ಉಪಸ್ಥಿತರಿದ್ದರು.