ಪೊನ್ನಂಪೇಟೆ; ನಿರ್ಮಾಣ ಹಂತದಲ್ಲಿರುವ ಹಾಕಿ ಟರ್ಫ್ ಮೈದಾನದ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕ ಎಎಸ್ ಪೊನ್ನಣ್ಣ
admincoorgdaily

ಪೊನ್ನಂಪೇಟೆ, ನ. 15: ಪೊನ್ನಂಪೇಟೆಯಲ್ಲಿ ನಿರ್ಮಾಣ ಹಂತದಲ್ಲಿರುವ ಹಾಕಿ ಟರ್ಫ್ ಮೈದಾನದ ಕಾಮಗಾರಿಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಪರಿಶೀಲಿಸಿದರು.
ಭಾನುವಾರ ಹಾಕಿ ಟರ್ಫ್ ಮರು ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದರು. ಸ್ವತಃ ಕ್ರೀಡಾಪಟುವಾಗಿರುವ ಪೊನ್ನಣ್ಣ ಅವರು, ಕೊಡಗಿನ ಹಾಕಿ ಕ್ರೀಡೆಯ ಪರಂಪರೆಯನ್ನು ಉಳಿಸಿ ಬೆಳೆಸುವ ಹಾಗೂ ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸುಸಜ್ಜಿತ ಮೈದಾನ ನಿರ್ಮಾಣಕ್ಕೆ 3.20 ಕೋಟಿ ರೂಪಾಯಿ ಅನುದಾನ ಒದಗಿಸಿದ್ದರು. ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದ ಅವರು, ಯಾವುದೇ ಲೋಪವಾಗದಂತೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ನಂತರ ಸಮೀಪದಲ್ಲಿರುವ ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡಿದ ಅವರು ,ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿ, ಅವರಿಗೆ ಎದುರಾಗುತ್ತಿರುವ ಸಮಸ್ಯೆಗಳು ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಅಹವಾಲು ಆಲಿಸಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜುನೈದ್, ಪಕ್ಷದ ಮುಖಂಡರಾದ ಕೊಲ್ಲಿರ ಬೋಪಣ್ಣ, ರಾಜ, ಅಜ್ಜಿಕುಟ್ಟೀರ ಪೊನ್ನಪ್ಪ, ಪೂವಯ್ಯ, ಸಜಾನ್, ಹ್ಯಾರೀಶ್, ಕುಂಡಚ್ಚಿರ ಮಂಜು ದೇವಯ್ಯ, ಪೊನ್ನಿಮಾಡ ಪ್ರದೀಪ್, ಅರುವತೊಕ್ಲು ವಲಯ ಅಧ್ಯಕ್ಷ ಯಶ್ವಿನ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.