ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಸೌಲಭ್ಯ ಕಲ್ಪಿಸಲುವ ಕಾರ್ಯಕ್ರಮಕ್ಕೆ ಚಾಲನೆ
admincoorgdaily

ಗೋಣಿಕೊಪ್ಪ, ಸೆ. 6: ಗೋಣಿಕೊಪ್ಪಲು ನಿವಾಸಿಗಳ ಬಹುಕಾಲದ ಬೇಡಿಕೆಯಾಗಿದ್ದ ಸುಸಜ್ಜಿತ ಬಸ್ ನಿಲ್ದಾಣವು ಈಗಾಗಲೇ ನಿರ್ಮಾಣಗೊಂಡು ಉದ್ಘಾಟನೆಗೊಂಡಿದ್ದು, ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು.
ಶನಿವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕರ ಧರ್ಮಪತ್ನಿ ಕಾಂಚನ್ ಪೊನ್ನಣ್ಣ ಅವರು ಉಪಸ್ಥಿತರಿದ್ದರು.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಕಸದ ತೊಟ್ಟಿ ಅಳವಡಿಕೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಪೊನ್ನಣ್ಣ, ದಿನನಿತ್ಯ ಈ ಭಾಗದಲ್ಲಿ ಸಾವಿರಾರು ಜನರು ಪ್ರಯಾಣಿಸುತ್ತಿದ್ದು, ಅವರ ಅನುಕೂಲಕ್ಕಾಗಿ ವಿಶೇಷ ಕಾಳಜಿ ವಹಿಸಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಇದಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಹಂತ ಹಂತವಾಗಿ ಕಲ್ಪಿಸಲಾಗುವುದು. ಗೋಣಿಕೊಪ್ಪ ಬಸ್ ನಿಲ್ದಾಣವನ್ನು ಮಾದರಿ ನಿಲ್ದಾಣವನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ಹಿರಿಯರಾದ ಮುಕಳೇರ ಕುಶಾಲಪ್ಪ, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷ ಕುಳಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ, ಪೊನ್ನಂಪೇಟೆ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜುನೈದ್, ನಾಯಂದಿರ ಶಿವಾಜಿ, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರಾದ ಅಜ್ಜಿಕುಟ್ಟಿರ ಪೊನ್ನಪ್ಪ, ಹ್ಯಾರೀಶ್, ಕಲೀದ್, ರಾಜಶೇಖರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.