ಮಡಿಕೇರಿಯಲ್ಲಿ ಎಸ್ಐಆರ್ ವಿರುದ್ಧ ಪ್ರತಿಭಟನೆ
admincoorgdaily

ಮಡಿಕೇರಿ: ದೆಹಲಿಯಲ್ಲಿ ಜನಪರ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಎಐಸಿಸಿ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಹೋರಾಟವನ್ನು ಬೆಂಬಲಿಸಿ, ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಹಾಗೂ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳ ಧ್ವನಿಯನ್ನು ದಮನ ಮಾಡುತ್ತಿದೆ ಎಂದು ಕಾರ್ಯಕರ್ತರು ದೂರಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರು ಮಾತನಾಡಿ, ಎಸ್‌ಐಆರ್ ಹೆಸರಲ್ಲಿ ಮತದಾರರ ಹಕ್ಕು ಕಸಿಯಲಾಗುತ್ತಿದೆ. ಇದನ್ನು ವಿರೋಧಿಸಿ ರಾಹುಲ್ ಗಾಂಧಿಯವರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೆಂಬಲ ನೀಡುವ ಸಲುವಾಗಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಚುನಾವಣಾ ಆಯುಕ್ರ ಜ್ಞಾನೇಶ್ ಕುಮಾರ್ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರು ಯಾವುದೇ ಕ್ರಮವಾಗಿಲ್ಲ. ಆದ್ದರಿಂದ ಎಸ್.ಐ.ಆರ್ ಅನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಪ್ರಮುಖರಾದ ತೆನ್ನಿರ ಮೈನಾ, ರಾಜೇಶ್ ಯಲ್ಲಪ್ಪ, ಪ್ರಕಾಶ್ ಆಚಾರ್ಯ ಸೇರಿದಂತೆ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.